ಚಿಕ್ಕಬಳ್ಳಾಪುರ:ರಾಜ್ಯದ ರೈತರಿಗೆ ನಿರಂತರವಾಗಿ ಏಳು ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ವಿಫಲವಾದರೆ, ವಿದ್ಯುತ್ ಸರಬರಾಜು ಕಂಪನಿಗಳ ಕಚೇರಿಗಳಿಗೆ ಬೀಗ ಜಡಿದು ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರದ ರೈತ ವಿರೋಧಿ ಧೋರಣೆ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
''ರೈತರಿಗೆ ಸಮಪರ್ಕವಾಗಿ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಈ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಇಂಧನ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ಕೊಟ್ಟಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹಣವೇ ಇಲ್ಲವಾಗಿದ್ದು, ಇಲಾಖೆಗೆ ಹಾಗೂ ಕಲ್ಲಿದ್ದಲು ಖರೀದಿಸಲು ಅನುದಾನ ಬಿಡುಗಡೆ ಮಾಡಿಲ್ಲ. ಅಲ್ಲದೇ, ರೈತರಿಗೆ ಪ್ರತಿನಿತ್ಯ ಸರಿಯಾಗಿ ಎರಡು ಗಂಟೆ ವಿದ್ಯುತ್ ಕೂಡ ನೀಡುತ್ತಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ'' ಎಂದು ಆರೋಪಿಸಿದರು.
ಮುಂದುವರೆದು ಮಾತನಾಡಿದ ಅವರು, ''1.50 ಲಕ್ಷ ನೀರಾವರಿ ಪಂಪ್‌ಸೆಟ್‌ಗಳಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿದ್ಯುತ್ ಕೊರತೆಯಿಂದ ಬೆಳೆಗಳೆಲ್ಲ ಒಣಗುತ್ತಿವೆ. ರೈತರಿಗೆ ಏಳು ಗಂಟೆ ತ್ರಿಫೇಸ್ ವಿದ್ಯುತ್ ನೀಡದಿದ್ದರೆ ಬಿಜೆಪಿ ಹೆಸ್ಕಾಂ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಿದೆ. ಸರ್ಕಾರ ಎಷ್ಟು ಜನರ ವಿರುದ್ಧ ಕೇಸುಗಳನ್ನು ದಾಖಲಿಸಿ ಜೈಲಿಗೆ ಕಳುಹಿಸಬಹುದು?, ಇಷ್ಟು ಸಂಖ್ಯೆಯ ಜನರು ಕೂಡ ಜೈಲಿಗೆ ಹೋಗಲು ಸಿದ್ಧರಿದ್ದೇವೆ" ಎಂದು ಎಚ್ಚರಿಸಿದರು.