ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್ ಹಾಗೂ ಮನೆ ಯಜಮಾನಿಗೆ 2 ಸಾವಿರ ಹಣ, 10 ಕೆಜಿ ಅಕ್ಕಿ ವಿತರಣೆ, ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇಲ್ಲಿನ ಪ್ರತಿಯೊಂದು ಮನೆಗೂ ಈ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.
ಕ್ಷೇತ್ರದ ಜನತೆಗೆ ಯಾವುದೇ ತೊಂದರೆ ಇದ್ದರೂ ಚಿಕ್ಕಬಳ್ಳಾಪುರ ನಗರದಲ್ಲಿ ಕಚೇರಿಯನ್ನು ತೆರೆಯುತ್ತಿದ್ದೇನೆ. ಅಲ್ಲಿಗೆ ಬಂದು ಮನವಿಯನ್ನು ಸಲ್ಲಿಸಬಹುದು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 1,800 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಮುಂದಿನ ವಾರ ಈ ಎಲ್ಲ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ 1,000 ರೂಪಾಯಿ ಸ್ಕಾಲರ್ಶಿಪ್ ನೀಡುತ್ತೇನೆ. ಅಲ್ಲದೇ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಜನತೆಗೆ ನೀಡಬೇಕೆಂದು ಚಿಂತಾಮಣಿ ಬಿಜೆಪಿ ಮುಖಂಡ ವೇಣುಗೋಪಾಲ್ ಒತ್ತಾಯಿಸಿದರು. 2023ರ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳನ್ನ ಘೋಷಿಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದಾಗಿ ತಿಳಿಸಿದ್ದರು. ಆದರೆ ಅಧಿಕಾರಕ್ಕೆ ಬಂದು ಒಂದು ತಿಂಗಳಾಗುತ್ತಿದ್ದರೂ ಇನ್ನೂ ಯಾವುದೇ ಗ್ಯಾರಂಟಿಗಳು ಜಾರಿಗೆ ಬಂದಿಲ್ಲ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಕೊಡುವಂತೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಬೇಕು. ಚುನಾವಣೆಯ ಸಮಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಷರತ್ತುಗಳನ್ನು ವಿಧಿಸಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಹಣ ಕೊಡುವುದಾಗಿ ಭರವಸೆ ಕೊಟ್ಟು ಮತ ಪಡೆದಿದ್ದಾರೆ. ಆದರೆ ಈಗ ಗೊಂದಲ ಸೃಷ್ಟಿಯಾಗಿದೆ. ಒಂದು ವೇಳೆ ಗ್ಯಾರಂಟಿ ಯೋಜನೆಗಳು ಜಾರಿಗೆ ಬಾರದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ :ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : ವಿಧಿಸುವ ಷರತ್ತುಗಳು ಏನು ಗೊತ್ತಾ?