ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ಮಳ್ಳೂರು ಎಸ್ಎಫ್ಸಿಎಸ್ ಬ್ಯಾಂಕ್ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ್ ಜ್ಞಾನ ಮಂದಿರ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ವಿ.ಮುನಿಯಪ್ಪ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹಾಜರಿದ್ದರು. ಈ ಸಂದರ್ಭದಲ್ಲಿ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ 1 ಕೋಟಿ 35 ಲಕ್ಷ ರೂ. ಬಡ್ಡಿ ರಹಿತ ಸಾಲ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಲಹಳ್ಳಿ ಗೋವಿಂದಗೌಡ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದಲ್ಲಿ ಮಹಿಳೆಯರ ಆರ್ಥಿಕವಾಗಿ ಅಭಿವೃದ್ಧಿ ಅಭಿಯಾನವನ್ನು ಆರಂಭಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ 100 ಕೋಟಿ ರೂ.ಗಳ ಸಾಲ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ ಈಗಾಗಲೇ 68 ಕೋಟಿಗಳ ಸಾಲವನ್ನು ವಿತರಿಸಲಾಗಿದ್ದು, ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಬ್ಯಾಂಕ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು. ಜೊತೆಗೆ ಮಹಿಳೆಯರು ಭ್ರಷ್ಟಚಾರ ಮುಕ್ತ ರಾಜಕೀಯ ವ್ಯವಸ್ಥೆಯನ್ನು ಜಾರಿಗೊಳಿಸಲು ಹೋರಾಟ ನಡೆಸಬೇಕೆಂದು ಕರೆ ನೀಡಿದರು.
ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ 100 ಕೋಟಿ ಸಾಲ ಶಾಸಕ ವಿ.ಮುನಿಯಪ್ಪ ಮಾತನಾಡಿ, ನೋಟು ನೀಡಿ ವೋಟು ಪಡೆಯುವ ವ್ಯಾಪಾರಿಗಳು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅಂತಹವರಿಂದ ಜಾಗೃತರಾಗಿರಬೇಕು. ಎಲ್ಲಾ ಮಹಿಳೆಯರಿಗೆ ಡಿಸಿಸಿ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದು, ಮಹಿಳೆಯರು ಬ್ಯಾಂಕಿನಿಂದ ಪಡೆದ ಸಾಲವನ್ನು ಮರುಪಾವತಿಸಿ ಇತರರಿಗೆ ಸಾಲ ಸೌಲಭ್ಯ ಕಲ್ಪಿಸಲು ಅವಕಾಶ ಮಾಡಿಕೊಡಬೇಕೆಂದರು.