ಬಾಗೇಪಲ್ಲಿ:ಜೂ.25 ರಿಂದ ಜು.04 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ತಾಲೂಕಿನಾದ್ಯಂತ 7 ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ಖಲೀಲ್ ತಿಳಿಸಿದ್ದಾರೆ.
ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಸೂಚನೆಯಂತೆ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ 7 ಪರೀಕ್ಷಾ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ತಾಲೂಕು ಸನ್ನದ್ಧವಾಗಿದೆ. ತಾಲೂಕಿನಲ್ಲಿ 2326 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರತಿ ವಿದ್ಯಾರ್ಥಿಗೆ ತಲಾ ಎರಡು ಮಾಸ್ಕ್ ಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ದಾನಿಗಳಿಂದ ಪಡೆದು, ವಿತರಿಸಲು ಕ್ರಮ ವಹಿಸಲಾಗಿದೆ. ಕೋವಿಡ್-19 ಲಕ್ಷಣಗಳುಳ್ಳ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಗಳನ್ನು ವಿತರಿಸಿ, ಪ್ರತಿ ಕೇಂದ್ರಕ್ಕೆ ತಲಾ 10 ಮಾಸ್ಕ್ ಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 06 ಲೀಟರ್ ನಂತೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ 02 ರಿಂದ 03 ಥರ್ಮಲ್ ಸ್ಕ್ಯಾನರ್ ಗಳನ್ನು ಮಂಡಳಿಯಿಂದ ಸರಬರಾಜು ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಎರಡರಿಂದ ಮೂರು ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಹಾಗೂ ಅಕ್ರಮ ತಡೆಗಟ್ಟಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.
ಅಗತ್ಯವಿರುವ ಕಡೆ ಬ್ಯಾರಿಕೇಡ್‍ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. 200 ವಿದ್ಯಾರ್ಥಿಗಳಿಗೆ ಒಂದರಂತೆ ಹೆಲ್ತ್ ಕೌಂಟರ್ ಗಳನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಯ ಹಾಗೂ ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಲು ಕ್ರಮ ವಹಿಸಲಾಗಿದೆ.
ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಯ ಎರಡು ದಿನ ಮುಂಚಿತವಾಗಿ ಹಾಗೂ ಪರೀಕ್ಷೆ ನಂತರವೂ ಸ್ಯಾನಿಟೈಸ್ ಮಾಡಿಸಲು ಕ್ರಮ ವಹಿಸಲಾಗಿದೆ. ಸ್ಯಾನಿಟೈಸರ್ ಅಲರ್ಜಿ ಎನ್ನುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಕೇಂದ್ರದಲ್ಲಿ ಒಂದು ಡ್ರಮ್ ನೀರು ಮತ್ತು ಹ್ಯಾಂಡ್‍ವಾಷ್ ವ್ಯವಸ್ಥೆ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಸಾಮಾಜಿಕ ಅಂತರ ಕಾಪಾಡಲು ದೈಹಿಕ ಶಿಕ್ಷಕರು ಮತ್ತು ಮೈಕ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಂತರ್ ರಾಜ್ಯದಿಂದ 27 ವಿದ್ಯಾರ್ಥಿಗಳು ಗಡಿ ಪ್ರದೇಶದ ಪರೀಕ್ಷಾ ಕೇಂದ್ರಗಳಿಗೆ ಬರಲಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಮತ್ತು ಅವಶ್ಯಕತೆ ಇರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ತಾಲೂಕಿನಾದ್ಯಂತ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.