ಚಿಕ್ಕಬಳ್ಳಾಪುರ: 2022-23 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಎರಡು ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಜಿಲ್ಲೆಯ ಗೌರಿಬಿದನೂರಿನಲ್ಲಿ ಹೇಳಿದರು.
ಗೌರಿಬಿದನೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ಮಾಣ ಹಂತದಲ್ಲಿರುವ ನೂತನ ಕಟ್ಟಡ ಮುಂದಿನ ಮೂರು ತಿಂಗಳಲ್ಲಿ ಆರಂಭವಾಗಲಿದೆ. ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸರಳ ಮೆಡಿಕಲ್ ಕಾಲೇಜು ಸಹ 2023ರ ಮಾರ್ಚ್ ಅಂತ್ಯದಲ್ಲಿ ಆರಂಭವಾಗಿ ಜನಸೇವೆಗೆ ಮುಕ್ತವಾಗಲಿವೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಎರಡು ಮೆಡಿಕಲ್ ಕಾಲೇಜು ಪ್ರಾರಂಭ ಆರೋಗ್ಯವಂತ ಸಮಾಜವನ್ನು ಮಾತ್ರ ಸಂಪದ್ಭರಿತ ಸಮಾಜ ಎಂದು ಕರೆಯಬಹುದು. ಅದಕ್ಕಾಗಿ ಬಿಜೆಪಿ ಸರ್ಕಾರ ಮುಂದಿನ ಡಿಸೆಂಬರ್ ಒಳಗೆ ನೂತನವಾಗಿ 438 'ನಮ್ಮ ಕ್ಲಿನಿಕ್'ಗಳನ್ನು ತೆರೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ 1080 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ಅತೀ ಹೆಚ್ಚು ಕೇಂದ್ರಗಳನ್ನು ತೆರೆದು ದೇಶದಲ್ಲಿಯೇ ಎರಡನೇ ಸ್ಥಾನಗಳಿಸಿದೆ. ಶೇ 80ರಷ್ಟು ರಿಯಾಯತಿಯಲ್ಲಿ ಜನರಿಗೆ ಔಷಧ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕೇವಲ 6 ತಿಂಗಳ ಅಂತರದಲ್ಲಿ 1,500 ವೈದ್ಯರನ್ನು ನೇಮಕ ಮಾಡಲಾಗಿದೆ. ಜೊತೆಗೆ ಹೊರಗುತ್ತಿಗೆ ಆಧಾರದಲ್ಲಿ 2,800 ವೈದ್ಯರು, 1,200 ತಜ್ಞ ವೈದ್ಯರು ಸೇರಿದಂತೆ ಒಟ್ಟು 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ. ಸರ್ಕಾರದ ಪ್ರತಿ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಹಾಸಿಗೆಗಳನ್ನು ಆಮ್ಲಜನಕ ಸಹಿತ ಹಾಸಿಗೆಗಳನ್ನಾಗಿಸಿ ಆರೋಗ್ಯ ಸೇವೆ ನೀಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಉನ್ನತ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ ವೈದ್ಯಕೀಯ ಯಂತ್ರೋಪಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗಿದೆ ಎಂದು ಹೇಳಿದರು.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಅಮೃತ ಯೋಜನೆಯಡಿ 8 ಸಾವಿರ ಕೋಟಿ ರೂ ಅನುದಾನವನ್ನು ನೀಡಲಾಗುತ್ತಿದೆ. ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ನೀಡಲು ಯೋಜನೆ ರೂಪಿಸಲಾಗಿದೆ. ದೇಶದ ಸಮಸ್ತ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈ ಕಾರ್ಯಕ್ಕೆ ಪ್ರಧಾನಮಂತ್ರಿ ಮತ್ತು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಶಿವಶಂಕರ್ ರೆಡ್ಡಿ ತಾಲೂಕು ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ:EXCLUSIVE: ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ಕೇಂದ್ರ ಸರ್ಕಾರ