ಚಿಂತಾಮಣಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಒಂದು ಪಂಪು ಮತ್ತು ಮೋಟರ್ಅನ್ನು ಜಿಲ್ಲಾ ಪಂಚಾಯಿತಿಯಿಂದ 2-3 ದಿನಗಳಲ್ಲಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆಯಿಂದ ಸಂಜೆಯವರೆಗೂ ಪಂಚಾಯಿತಿ ಕೇಂದ್ರದಲ್ಲಿ ಇರಬೇಕು. ಕೋವಿಡ್ ಆತಂಕ ಒಂದು ಕಡೆಯಾದರೆ, ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎರಡೂ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಜಾಗೃತಿ ಮೂಡಿಸಿ ದೂರುಗಳು ಬಾರದಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.
ಕೊರೊನಾ ನಿಯಂತ್ರಣ, ನೀರಿನ ಸಮಸ್ಯೆ ಕುರಿತು ಪರಿಶೀಲನಾ ಸಭೆ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರನ್ನು ಖಾಸಗಿ ಕೊಳವೆ ಬಾವಿಗಳು ಮತ್ತು ಟ್ಯಾಂಕರ್ ಮೂಲಕ ಪೂರೈಕೆ ಮಾಡಬೇಕು. ಖಾಸಗಿ ಕೊಳವೆ ಬಾವಿಗಳ ಮಾಲೀಕರು ಒಪ್ಪದಿದ್ದರೆ ಸರ್ಕಾರದ ಆದೇಶದಂತೆ ವಶಪಡಿಸಿಕೊಳ್ಳಬೇಕು. ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಅಭಿವೃದ್ಧಿ ಅಧಿಕಾರಿಗಳು ಸಮಸ್ಯೆಗಳನ್ನು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲು ಸೂಚಿಸಿದರು.
ಶಾಸಕ ಎಂ.ಕೃಷ್ಣಾರೆಡ್ಡಿ ಮಾತನಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀರಿನ ಸಮಸ್ಯೆ ಬಗೆಹರಿಸಬೇಕು. ಗ್ರಾಮಗಳ ಜನಸಂಖ್ಯೆ, ಜಾನುವಾರುಗಳು, ಕುಡಿಯುವ ನೀರಿನ ಬೇಡಿಕೆ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದರು.