ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಮನೆಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.
ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ(ಸೆಪ್ಟೆಂಬರ್ 18-2023) ಬೆಳಗ್ಗೆ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆದಿತ್ತು.