ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಿಂದ ಕಾರು ಉರುಳಿ ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ಹಾನಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಂಗನ ಕುಡಿಕೆ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಪಾತದಿಂದ ಕಾರು ಉರುಳಿ ಮನೆಯ ಗೋಡೆಗೆ ಗುದ್ದಿದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬ್ರೇಕ್ ಫೇಲ್ ಆದ ಪರಿಣಾಮ ತಡೆಗೋಡೆಗೆ ಬಸ್ ಡಿಕ್ಕಿ :ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಬಿಆರ್ಟಿಎಸ್ (ಬಸ್ ಕ್ಷಿಪ್ರ ಸಾರಿಗೆ ವ್ಯವಸ್ಥೆ) ಬಸ್ ಬ್ರೇಕ್ ಫೇಲ್ ಆಗಿ ರಸ್ತೆ ಡಿವೈಡರ್ನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಬಿಆರ್ಟಿಎಸ್ ಸಿಬ್ಬಂದಿ ಬಸ್ ಹೊರತೆಗೆಯುವ ಕಾರ್ಯಾಚರಣೆ ನಡೆಸಿದರು. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.