ಚಿಕ್ಕಮಗಳೂರು: ಪ್ರಾರ್ಥನಾ ಮಂದಿರದ ಮುಂಭಾಗ ಕಟ್ಟಿದ್ದ ಬಾವುಟದ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಗರದಲ್ಲಿ ನಡೆದಿದೆ.
ಈ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ಪ್ರತಿಕ್ರಿಯಿಸಿದ್ದು, "ಶೃಂಗೇರಿಯ ಪಟ್ಟಣದ ವೆಲ್ ಕಮ್ ಗೇಟ್ ಮುಂಭಾಗ ದತ್ತಮಾಲಾ ಅಭಿಯಾನದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಬಾವುಟ ಕಟ್ಟಿದ್ದರು. ಪ್ರಾರ್ಥನಾ ಮಂದಿರದ ಮುಂಭಾಗದ ಬಾವುಟಗಳನ್ನು ಪೊಲೀಸರು ಪಟ್ಟಣ ಪಂಚಾಯಿತಿ ಸದಸ್ಯರ ಮೂಲಕ ತೆರವುಗೊಳಿಸಿದ್ದರು. ಆದರೆ ಈ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. ಸದ್ಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಹಾಗೂ ರಫೀಕ್ನಿಂದ ದೂರು- ಪ್ರತಿ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ" ಎಂದರು.
"ಆ ಜಾಗ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ. 2012ರಲ್ಲಿಯೇ ಜಿಲ್ಲಾಧಿಕಾರಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅಲ್ಲಿ ಯಾರೂ ಕೂಡ ಬ್ಯಾನರ್ ಹಾಗೂ ಬಂಟಿಂಗ್ಸ್ ಕಟ್ಟಬಾರದು" ಎಂದು ಇದೇ ವೇಳೆ ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟಪಡಿಸಿದರು.
ಪ್ರಕರಣದ ವಿವರ:ಶೃಂಗೇರಿಯ ವೆಲ್ ಕಮ್ ಗೇಟ್ನಲ್ಲಿರುವ ಪ್ರಾರ್ಥನಾ ಮಂದಿರದ ಮುಂಭಾಗ ಬಾವುಟ, ಬಂಟಿಂಗ್ಸ್‌ಗಳನ್ನು ಕಟ್ಟಲಾಗಿತ್ತು. ಈ ವಿಚಾರವಾಗಿ ಶ್ರೀರಾಮಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಇಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.