ಚಿಕ್ಕಮಗಳೂರು:ಬಿಜೆಪಿ ಭದ್ರಕೋಟೆ ಎಂದು ಗುರುತಿಸಿಕೊಂಡಿದ್ದ ಕಾಫಿ ನಾಡಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಈ 2018ರ ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರದಲ್ಲಿ ಬಿಜೆಪಿ ಮತ್ತು ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಶಾಸಕರಾಗಿದ್ದರು. ಈ ಜಿಲ್ಲೆಯಲ್ಲಿ ಸತತವಾಗಿ ಬಿಜೆಪಿ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಯಿ ಹಿಡಿಯುತ್ತ ಬಂದಿದ್ದರು. ಆದರೆ ಈ ಬಾರಿ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ರಾಜ್ಯದಲ್ಲಿ ಪ್ರಮುಖ ಕ್ಷೇತ್ರವಾಗಿ ಗುರುತಿಸಿಕೊಂಡಿದ್ದ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕ್ಷೇತ್ರ ಅಭ್ಯರ್ಥಿಯಾಗಿರುವ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 85051 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 79120 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಈಗ ಅವರ ಆಪ್ತ ಹೆಚ್ ಡಿ ತಮ್ಮಯ್ಯ ಕೈ ವಶವಾಗಿದೆ.
ಇನ್ನು ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಬಿಜೆಪಿಯು ದೀಪಕ್ ದೊಡ್ಡಯ್ಯ ವಿರುದ್ಧ ನಯನಾ ಮೋಟಮ್ಮ 2,419 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ. ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ನಯನಾ ಮೋಟಮ್ಮ ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ಎಂಬುದು ವಿಶೇಷ.