ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಆಚರಣೆ ಕುರಿತು ನಡೆದ ಪೂರ್ವ ಸಿದ್ಧಾತಾ ಸಭೆಯ ಕುರಿತು ಮಾತನಾಡಿದ ಅವರು, ದೇಶಾದ್ಯಂತ ಕೋವಿಡ್-19 ಇರುವ ಹಿನ್ನೆಲೆ ಕಾರ್ಯಕ್ರಮವನ್ನು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ನಡೆಸಬೇಕು. ಶಾಂತಿ, ಸುವ್ಯವಸ್ಥೆ ಹಾಗೂ ಶಿಸ್ತು ಪಾಲನಾ ದೃಷ್ಠಿಯಿಂದ ಮಾಸ್ಕ್ ಧರಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹೇಳಿದರು.
ದತ್ತಪೀಠದ ರಸ್ತೆಯು ಗುಂಡಿಗಳಿಂದ ಕೂಡಿದೆ. ರಸ್ತೆ ಗುಂಡಿಗಳನ್ನು ದುರಸ್ಥಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಅಂಬ್ಯುಲೆನ್ಸ್‌ನೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಆದೇಶಿಸಿದರು.
ಕೋವಿಡ್ ಮಾರ್ಗಸೂಚಿ ಪಾಲನೆಗೆ ಡಿಸಿ ಸೂಚನೆ ನಗರದ ಹೊರವಲಯದ ಅಲ್ಲಂಪುರ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲುಗಡೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ತಾತ್ಕಾಲಿಕ ವಿದ್ಯುತ್ ಸಂಪರ್ಕ, ಭಕ್ತಾದಿಗಳ ಅಗತ್ಯಕ್ಕೆ ತಕ್ಕಂತೆ ಬಸ್ ಸೌಕರ್ಯ ಹಾಗೂ ಖಾಸಗಿ ಮಿನಿ ಬಸ್ ಸೌಕರ್ಯ ನಿಯೋಜಿಸುವಂತೆ ಕೆ.ಎಸ್.ಆರ್.ಟಿ.ಸಿ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೂ ತಿಳಿಸಿದರು.
ದತ್ತಪೀಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಬಿ.ಎಸ್.ಎನ್.ಎಲ್ ಮೊಬೈಲ್ ನೆಟ್ವರ್ಕ್ ವ್ಯವಸ್ಥಿತವಾಗಿರಬೇಕು. ದತ್ತ ಜಯಂತಿ ಕಾರ್ಯಕ್ರಮಗಳ ದಿನಗಳಲ್ಲಿ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗುವುದು. ತಾತ್ಕಾಲಿಕ ಆಸ್ಪತ್ರೆಗೆ ಹಾಗೂ ಸಂಸ್ಥೆಯ ಆವರಣಕ್ಕೆ ಸುಣ್ಣ ಬಣ್ಣ ಬಳಿಯುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಹೇಳಿದರು.
ನಗರ ಅಲಂಕಾರಕ್ಕಾಗಿ ನಿಗದಿಪಡಿಸಿದ ಸ್ಥಳಗಳ ಪಟ್ಟಿ ಪಡೆದು, ಅವುಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಹಾಕುವ ಬಂಟಿಂಗ್ಸ್ ಹಾಗೂ ಬ್ಯಾನರ್ ಮತ್ತು ಧಾರ್ಮಿಕ ಕಟ್ಟಡಗಳ ಮುಂದೆ ಹಾಕುವ ಪ್ಲೆಕ್ಸ್‌ಗಳ ಮೇಲೆ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದರು.