ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡಿನಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪಿಎಸ್ಐ ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐಯಿಂದ ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಯುವಕ ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಿ ಕ್ರಮ ಕೊಳ್ಳಲಾಗಿದೆ.
ಇದನ್ನೂ ಓದಿ: ಠಾಣೆಗೆ ಕರೆದು ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ಮಹಿಳೆಗೆ ಕರೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಠಾಣೆಯ ಪಿಎಸ್ಐ, ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಠಾಣಾಧಿಕಾರಿ ಅರ್ಜುನ್ ವಿರುದ್ಧ ಯುವಕ ಗಂಭೀರ ಆರೋಪ ಮಾಡಿದ್ದಾನೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿನಾ ಕಾರಣ ಠಾಣೆಗೆ ಕರೆಸಿಕೊಂಡು ಠಾಣಾಧಿಕಾರಿ ಅರ್ಜುನ್ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ನನಗೆ ಮೂತ್ರ ಕುಡಿಸಿದ್ದಾರೆ ಎಂದು ದೌರ್ಜನ್ಯಕ್ಕೊಳಗಾದ ವ್ಯಕ್ತಿ ಗಂಭೀರ ಆರೋಪ ಮಾಡಿದ್ದ.
ಯುವಕನ ದೂರು ಆಧರಿಸಿ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಾಗಿದೆ.