ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ಕಾಡಾನೆ ದಾಳಿಗೆ ಓಮಿನಿ ಕಾರೊಂದು ನಜ್ಜುಗುಜ್ಜಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ಮೂಡಿಗೆರೆ ತಾಲೂಕಿನಲ್ಲಿ ಹಲವರ ಮೇಲೆ ಕಾಡಾನೆಗಳು ದಾಳಿ ಮಾಡಿ ಆತಂಕ ಉಂಟು ಮಾಡಿದ್ದವು. ಈ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ.
ಮೂಡಿಗೆರೆಯ ಸಬ್ಬನಹಳ್ಳಿ- ಕುಂದೂರು ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಓಮಿನಿ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಪರಿಣಾಮ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ಜನರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರಿನ ಕುಪ್ಪಳ್ಳಿ ಜೋಳದಾಳ್ ಮೂಲದ ಚಂದ್ರಣ್ಣ, ಮೋಹಿನಿ, ಅವನೀಷ್ (6). ಮೂಡಿಗೆರೆಯ ರಾಧಮ್ಮ ತೀವ್ರವಾಗಿ ಗಾಯಗೊಂಡವರು. ಇವರನ್ನು ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆಗೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಅಸ್ಪತ್ರಗೆ ರವಾನೆ ಮಾಡಲಾಗಿದೆ.
ಸ್ಥಳೀಯರು ಕಾಡಾನೆ ದಾಳಿ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.