ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗ ಹಾಗೂ ವಿವಿಧ ತಾಲೂಕುಗಳಲ್ಲಿ ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಮೈಮೇಲೆ ಮರ ಬಿದ್ದು ಕಳಸ ತಾಲೂಕಿನ ಸಂಪಿಖಾನ್ ಗ್ರಾಮದ ಶಂಕರ ಗೌಡ (42) ಎಂಬವರು ಗಾಯಗೊಂಡಿದ್ದಾರೆ.
ಜಾನುವಾರುಗಳಿಗೆ ಹುಲ್ಲು ಕೊಯ್ಯುವಾಗ ಶಂಕರ ಗೌಡರ ಮೈಮೇಲೆ ಮರ ಬಿದ್ದಿದೆ. ಸುದ್ದಿ ತಿಳಿದು ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದರು. ಮರ ಬಿದ್ದ ರಭಸಕ್ಕೆ ಎದೆ, ಒಂದು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಕಳಸ ಆಸ್ಪತ್ರೆಗೆ ಸ್ಥಳೀಯರು ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು, ಮಳೆಯಿಂದ ಜಿಲ್ಲೆಯ ವಿವಿಧೆಡೆ ಮನೆಗಳು ಕುಸಿದ ಘಟನೆಗಳು ವರದಿಯಾಗಿವೆ. ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದಿದೆ. ಗ್ರಾಮದ ಅನಿಯಮ್ಮ ನಟೇಶ್ ಎಂಬವರಿಗೆ ಸೇರಿದ ಮನೆ ಕುಸಿದು ಬಿದ್ದಿದ್ದು ಹಲವು ವಸ್ತುಗಳಿಗೆ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ನಾಯ್ಕ್, ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಆಗಮಿಸಿ ಮನೆ ಪರಿಶೀಲನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ವೀರಮಣಿ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಪರಿಹಾರದ ಭರವಸೆ ನೀಡಿದ್ದಾರೆ. ಹೊಸಪೇಟೆ ಸಮೀಪದ ಶಿವಪುರ ಗ್ರಾಮದ ರಾಜೇಂದ್ರ ಎಂಬವರಿಗೆ ಸೇರಿದ ಮನೆ ಕುಸಿದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.