ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ನೆಚ್ಚಿನ ಜಿಲ್ಲೆಗಳಲ್ಲಿ ಒಂದು. ಅದ್ರಲ್ಲೂ ಕಾಫಿನಾಡಿನ ಮುಳ್ಳಯ್ಯನಗಿರಿ ಪ್ರವಾಸಿಗರ ಹಾಟ್ ಸ್ಪಾಟ್. ಇಲ್ಲಿನ ಪ್ರವಾಸಿ ತಾಣಗಳು ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಯಿಂದ ಈ ಭಾಗಕ್ಕೆ ಪ್ರವಾಸಿಗರು ಆಗಮಿಸಿ ಇಲ್ಲಿಂದ ನೈಸರ್ಗಿಕ ಸೌಂದರ್ಯ ಸವಿಯುತ್ತಿದ್ದಾರೆ. ಆದರೆ ಕಾಫಿನಾಡಿನ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಮರೀಚಿಕೆಯಾಗಿದೆ.
ರಾಜ್ಯದಲ್ಲಿ ಅತ್ಯಂತ ಎತ್ತರದ ಪ್ರದೇಶ ಎಂದು ಪ್ರಸಿದ್ಧಿ ಪಡೆದಿರುವ ಪ್ರವಾಸಿ ತಾಣ ಮುಳ್ಳಯ್ಯನ ಗಿರಿ ಇರುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಇದು ಚಿಕ್ಕಮಗಳೂರು ಜಿಲ್ಲೆಯ ಮುಕುಟ. ಕಳೆದ ಕೆಲವು ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಳಗೊಳ್ಳುತ್ತಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇಲ್ಲಿನ ತಣ್ಣನೆ ಗಾಳಿ, ಸ್ವಚ್ಛಂದ ಪರಿಸರ, ರಸ್ತೆ ಉದ್ದಕ್ಕೂ ಸಿಗುವ ಜಲಪಾತಗಳು ಬರುವಂತಹ ಇಲ್ಲಿಗೆ ಬರುವ ಪ್ರವಾಸಿಗರನ್ನು ಮಂತ್ರ ಮುಗ್ಧರನ್ನಾಗಿಸುತ್ತಿದೆ.
ಆದರೆ ಇಲ್ಲಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಪೂರ್ಣ ವಿಫಲವಾಗಿದೆ. ಮೂಲಭೂತ ಸೌಲಭ್ಯವಿಲ್ಲದೆ ಪ್ರವಾಸಿಗರು ಕಿರಿಕಿರಿ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಸೀತಾಳಯ್ಯನಗಿರಿ, ದತ್ತಪೀಠಗೆ ಬರುವ ಪ್ರವಾಸಿಗರಿಗೆ ಸೂಕ್ತವಾದ ಮೂಲಭೂತ ಸೌಕರ್ಯ ಸಿಗುತ್ತಿಲ್ಲ. ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದು ಪ್ರವಾಸಿಗರ ಜಿಲ್ಲಾಡಳಿತ ವಿರುದ್ಧ ಪ್ರವಾಸಿಗರು ಕಿಡಿ ಕಾರಿದ್ದಾರೆ. ಇನ್ನು ಕೆಲವೆಡೆ ಇರುವ ಶೌಚಾಲಯಕ್ಕೆ ನಿರ್ವಹಣೆಗೆ ಸಿಬ್ಬಂದಿ ನಿಯೋಜಿಸದೇ ನಿರ್ಲಕ್ಷ್ಯ ತೋರಲಾಗಿದೆ.