ಚಿಕ್ಕಮಗಳೂರು :ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೊರೊನಾ ಪಾಸಿಟಿವ್ ಕೇಸ್ ಪತ್ತೆ ಆಗಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.
ಇಲ್ಲಿವರೆಗೆ ಜಿಲ್ಲಾಸ್ಪತ್ರೆಗೆ ದಾಖಲಾದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಪಡೆಯುತ್ತಿದ್ದು ವರದಿಯಲ್ಲಿ ನೆಗೆಟಿವ್ ಬಂದಿದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ 38 ಐಸೋಲೇಶನ್ ಬೆಡ್ ರೆಡಿ ಇದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಕೂಡ 74 ಐಸೋಲೇಶನ್ ಬೆಡ್ ರೆಡಿ ಮಾಡಲಾಗಿದೆ. ಕೊರೊನಾ ವೈರಸ್ ಪ್ರಕರಣವನ್ನು ಚಿಕಿತ್ಸೆ ಮಾಡುವಂತಹ ವೈದ್ಯರು ಹಾಗೂ ನರ್ಸ್ಗಳಿಗೆ ಅಗತ್ಯ ವಸ್ತುಗಳನ್ನು ನೀಡುವುದಕ್ಕೆ, ಆ ವಸ್ತುಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಲಾಗಿದೆ. ನಮ್ಮ ಜಿಲ್ಲೆಯಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದ್ದು, ಸರ್ಕಾರಿ ಅಧಿಕಾರಿಗಳು, ಅಂಗನವಾಡಿ ಕೇಂದ್ರ, ಶಾಲಾ- ಕಾಲೇಜು, ಜನ ಸಂದಣಿ ಜಾಗಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮುಂದಿನ ಒಂದು ತಿಂಗಳ ಕಾಲ ಚಿಕ್ಕಮಗಳೂರು ಜಿಲ್ಲೆ ಪ್ರವಾಸ ಮಾಡಬೇಡಿ, ನಿಮ್ಮ ಪ್ರವಾಸದ ದಿನವನ್ನು ಮುಂದೂಡಿ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮನವಿ ಮಾಡಿದ್ದಾರೆ.