ಚಿಕ್ಕಮಗಳೂರು: ಜಿಲ್ಲೆಯ ಎನ್ಆರ್‌ಪುರ ತಾಲೂಕಿನ ಬಾಳೆಹೊನ್ನೂರಿನ ಸೀಗೊಡು ಸಮೀಪ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾರೆ.
ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ನೆಕ್ಸಾನ್ ವಾಹನವೊಂದು ರಭಸವಾಗಿ ಮರಕ್ಕೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ವಾಹನ ಇದಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಐವರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ವ್ಯಕ್ತಿಯ ಸ್ಥಿತಿ ಬಹಳ ಗಂಭೀರವಾಗಿದೆ. ಕಾರಿನಲ್ಲಿದ್ದ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕೂಡಲೇ ಸ್ಥಳೀಯರು ಧಾವಿಸಿ ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ. ಗಂಭೀರವಾಗಿರುವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಹಾಗೂ ಉಳಿದ ಗಾಯಾಳುಗಳನ್ನು ಬಾಳೆಹೊನ್ನೂರು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.