ಚಿಕ್ಕಮಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಮತ್ತು ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ನಿರಂತರ ಮಳೆಗೆ ಜಿಲ್ಲೆಯಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲಿ ಭೂಕುಸಿದಿದೆ. ಹೀಗಾಗಿ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮಳೆಯ ನಡುವೆ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದ ಪ್ರವಾಸಿಗರಿಗೆ ನಿರಾಸೆ ಆಗಿದೆ.
ಮುಳ್ಳಯ್ಯನಗಿರಿ, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿಯುತ್ತಿದೆ. ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು ಮುಳ್ಳಯ್ಯನಗಿರಿ ಮಾರ್ಗದ ರಸ್ತೆಗೆ ಗುಡ್ಡದ ಮಣ್ಣು ನಿರಂತರವಾಗಿ ಕುಸಿಯುತ್ತಿದೆ. ಇದರಿಂದಾಗಿ ರಸ್ತೆ ಸಂಚಾರದಲ್ಲಿ ತೊಡಕುಂಟಾಗಿದೆ. ಮುಳ್ಳಯ್ಯನಗಿರಿಯಲ್ಲೂ ಮಳೆ ಮುಂದುವರೆದಿದ್ದು, ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಮಲೆನಾಡು ಭಾಗದಲ್ಲೂ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಪೊಲೀಸರಿಗೆ ಪ್ರವಾಸಿಗರನ್ನು ನಿಯಂತ್ರಿಸುವುದೇ ತಲೆನೋವಾಗಿದೆ. ಚಾರ್ಮಾಡಿ ಘಾಟಿಯ ಬಂಡೆ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದಾರೆ. ಬಂಡೆ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ಸ್ವಲ್ಪ ಸಮತೋಲನ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಪೊಲೀಸರು ಎಚ್ಚರಿಸಿದ್ದಾರೆ.