ಚಿಕ್ಕಮಗಳೂರು:ಕೋವಿಡ್-19 ತುರ್ತು ಸಂದರ್ಭದಲ್ಲಿ ಜಿಲ್ಲೆಗೆ ಬೇರೆ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದವರಿಗೆ ಹಾಸ್ಟೆಲ್ ಕ್ವಾರಂಟೈನ್ ಮಾಡಿ ಅವರಿಗೆ ಉತ್ತಮ ಆಹಾರವನ್ನು ಪೂರೈಸಲಾಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎನ್. ಕೃಷ್ಣಮೂರ್ತಿ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಜೂನ್ 16 ರಿಂದ 19 ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ, ವಿದ್ಯಾರ್ಥಿ ನಿಲಯಗಳಿಗೆ ಹಾಗೂ ರೈತ ಕೇಂದ್ರಗಳಿಗೆ ಭೇಟಿ ನೀಡುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಜಿಲ್ಲೆಯಲ್ಲಿ ಈವರೆಗೆ 27 ಹಾಸ್ಟೆಲ್ ಕ್ವಾರಂಟೈನ್‌ಗಳಲ್ಲಿ 24 ಕ್ವಾರಂಟೈನ್ ಕೇಂದ್ರಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದವರಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರಗಳಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಂದ ಮಾಹಿತಿ ಪಡೆದರು.
ಕ್ವಾರಂಟೈನ್‌ನಲ್ಲಿ ಇರುವವರಿಗೆ ಹಾಸ್ಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಂದಲೇ ಅಡುಗೆ ಸಿದ್ಧ ಪಡಿಸಲಾಗುತ್ತಿರುವ ಬಗ್ಗೆಯೂ ಮಾಹಿತಿ ಪಡೆದರು. ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಸುರಕ್ಷತಾ ಪರವಾನಗಿ ಹಾಗೂ ತೂಕದ ಯಂತ್ರದ ಸತ್ಯಾಪನಾ ಪ್ರಮಾಣ ಪತ್ರಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವ ಬಗ್ಗೆ ಹಾಗೂ ನ್ಯಾಯಬೆಲೆ ಅಂಗಡಿಗಳನ್ನು ಸ್ವಚ್ಛವಾಗಿಡುವ, ಅನಗತ್ಯ ವಸ್ತುಗಳನ್ನು ಇಟ್ಟುಕೊಳ್ಳದಂತೆ ಸೂಚಿಸಿರುವ ಬಗ್ಗೆ ತಿಳಿಸಿದ ಅವರು ಈ ರೀತಿ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸೀಮೆ ಎಣ್ಣೆಯನ್ನು ಅಕ್ಕಿಯೊಂದಿಗೆ ದಾಸ್ತಾನು ಮಾಡದೇ ಪ್ರತ್ಯೇಕವಾಗಿ ಇರಿಸಲು ಸೂಚಿಸಲಾಗಿದ್ದು, ಸರ್ಕಾರ ನಿಗದಿಪಡಿಸಿದ ದರದ ಪ್ರಮಾಣದಲ್ಲಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸುವಂತೆ ಮತ್ತು ಪಡಿತರ ಚೀಟಿದಾರರಿಂದ ಯಾವುದೇ ಹಣ ಪಡೆದಂತಹ ಪ್ರಕರಣಗಳು ಕಂಡು ಬಂದರೆ ಹಾಗೂ ಸಾರ್ವಜನಿಕರು ದೂರು ನೀಡಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಶಿಸ್ತುಬದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.