ಚಿಕ್ಕಮಗಳೂರು: ಪಿಸ್ತೂಲ್ ಹಿಡಿದು ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಯುವಕನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೀರೂರು ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್, 8 ಜೀವಂತ ಗುಂಡು, ಡ್ರಾಗರ್ ಸೇರಿದಂತೆ 40 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಮೀರ್ ಕಡೂರಿನ ಎಪಿಎಂಸಿ ಮಾರುಕಟ್ಟೆ ಬಳಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ಹೋಗುತ್ತಿದ್ದ ಸಾರ್ವಜನಿಕರಿಗೆ ಬೆದರಿಸುತ್ತಿದ್ದನು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಮೀರ್ ಸೆಕೆಂಡ್ ಹ್ಯಾಂಡ್ ಕಾರು, ಬೈಕ್ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಮಾತನಾಡಿ, "ಅಕ್ಟೋಬರ್ 8ರಂದು ಕಡೂರು ಪೊಲೀಸರು ಗಸ್ತು ತಿರುಗುತ್ತಿದ್ದಾಗ ವ್ಯಕ್ತಿಯೋರ್ವ ಇಲ್ಲಿನ ಎಪಿಎಂಸಿ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ವ್ಯಕ್ತಿಯೋರ್ವ ಅನುಮಾನಾಸ್ಪವಾಗಿ ತಿರುಗುತ್ತಿರುವುದು ಕಂಡುಬಂದಿದೆ. ತಕ್ಷಣ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಡೂರು ತಾಲೂಕಿನ ಸಮೀರ್ ಎಂದು ಗುರುತಿಸಲಾಗಿದೆ. ಒಂದು ಪಿಸ್ತೂಲ್, 8 ಗುಂಡುಗಳು, 50 ಗ್ರಾಂ ಗಾಂಜಾ ಜೊತೆಗೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಿವಿಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ತಿಳಿಸಿದರು.