ಚಿಕ್ಕಮಗಳೂರು: ಇಲ್ಲಿನ ಗ್ರಾಮವೊಂದರಲ್ಲಿ ಜನರಿಗೆ ಓಡಾಡಲು ಸರಿಯಾದ ರಸ್ತೆ ಇಲ್ಲ. ಕುಡಿಯಲು ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕವೂ ಇಲ್ಲ. ಹೀಗೆ ಕನಿಷ್ಠ ಮೂಲ ಸೌಕರ್ಯಗಳು ಇಲ್ಲದೆ ಪರದಾಡುತ್ತಿರುವ ಜಿಲ್ಲೆಯ ಕಳಸ ತಾಲೂಕಿನ ಕುಂಬಳಡಿಕೆ ಗ್ರಾಮದ ಜನರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿದ್ದಾರೆ. ಇದಕ್ಕೆ ಪ್ರಧಾನಿ ಕಚೇರಿಯಿಂದ ಪೂರಕ ಪ್ರತಿಕ್ರಿಯೆ ದೊರೆತಿದ್ದು, ಗ್ರಾಮಸ್ಥರು ಸಂತಸಗೊಂಡಿದ್ದಾರೆ.
ಜಿಲ್ಲೆಯ ಕಳಸ ತಾಲೂಕಿನ ಕುಂಬಳಡಿಕೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಈ ಗ್ರಾಮದಲ್ಲಿ ಬರೋಬ್ಬರಿ 70ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಕನಿಷ್ಠ ಮೂಲ ಸೌಕರ್ಯ ಇಲ್ಲದೆ ದಿನ ದೂಡುವಂತಾಗಿದೆ. ಕಳೆದ ಮೂರು ದಶಕಗಳಿಂದ ಇಲ್ಲಿನ ಜನರು ಇದೇ ರೀತಿ ಜೀವನ ಸಾಗಿಸುತ್ತಿದ್ದಾರೆ. ಮೂಲ ಸೌಕರ್ಯ ಕಲ್ಪಿಸುವಂತೆ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಹಾಗಾಗಿ ತಮ್ಮ ಸಮಸ್ಯೆಗಳನ್ನು ಪರಿಹಾರಕೊಳ್ಳಲು ಗ್ರಾಮಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖುದ್ದಾಗಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಕಚೇರಿಯು ಪರಿಹಾರ ಒದಗಿಸುವ ಭರವಸೆ ನೀಡಿರುವುದಲ್ಲದೆ, ಮುಂದಿನ ಹತ್ತು ದಿನಗಳಲ್ಲಿ ಪ್ರಧಾನಿ ಮೋದಿ ಅವರೇ ಕರೆ ಮಾಡಿ ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.