ಚಿತ್ರದುರ್ಗ:ಕೆಲವೇ ದಿನಗಳಲ್ಲಿ ಕೋವಿಡ್ಗೆ ಲಸಿಕೆ ಲಭ್ಯವಾಗಲಿದ್ದು, ಅದನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಲಸಿಕೆ ವ್ಯವಸ್ಥಿತ ಅನುಷ್ಠಾನಕ್ಕೆ ಸಿದ್ಧರಾಗಿ: ಜಿಲ್ಲಾಧಿಕಾರಿ ಕವಿತಾ - ಕೊರೊನಾ ಲಸಿಕೆ
ಕೊರೊನಾ ಲಸಿಕೆ ಲಭ್ಯವಾದ ನಂತರ ಆರೋಗ್ಯ ಇಲಾಖೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಮೊದಲಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಆ ನಂತರ ಉಳಿದ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಲಸಿಕೆ ಮೊದಲ ಬಾರಿಗೆ ಆರೋಗ್ಯ ಇಲಾಖೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ ಎಂದರು.
ನಂತರದ ದಿನಗಳಲ್ಲಿ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ, ಪೌರಕಾರ್ಮಿಕರು ಸೇರಿದಂತೆ ಇತರ ಕ್ಷೇತ್ರದಲ್ಲಿ ಇರುವವರಿಗೆ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಕೋವಿಡ್ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲು ಸಿದ್ದವಿದೆ. ಯಾವ ಅಧಿಕಾರಿ ನಿರ್ಲಕ್ಷ್ಯ ಮಾಡುತ್ತಾರೋ ಅಂತಹವರಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು.