ಚಿತ್ರದುರ್ಗ:ಎಸ್ಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯನ್ನು ಸರ್ಕಾರದ ಪ್ರತಿಷ್ಠೆಗಾಗಿ ಮಾಡುತ್ತಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಹೇಳಿದ್ದಾರೆ.
ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಬಿಇಒಗಳೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ ಸಚಿವರು ಮಾತನಾಡಿದರು. ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಹಲವು ರಾಜ್ಯಗಳು ತೀರ್ಮಾನಿಸಿವೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿಯೇ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಅನುಭವ ಇದೆ. ಹೀಗಾಗಿ ಮಕ್ಕಳನ್ನು ಪರೀಕ್ಷೆಗೆ ಸಿದ್ದತೆಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.
ಪರೀಕ್ಷೆಗೆ ಸಂಬಂಧಿಸಿದಂತೆ ಹಲವು ಶಾಲೆಗಳನ್ನು ಭೇಟಿ ಮಾಡಿ ಮಕ್ಕಳ ಅಭಿಪ್ರಾಯ ಸಂಗ್ರಹಿಸಲಾಗಿದೆ. 16 ಜಿಲ್ಲೆಯಲ್ಲಿ ಸಭೆ ನಡೆಸಿ ಶಿಕ್ಷಣ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅಲ್ಲಿ ವ್ಯಕ್ತವಾದ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸಿ ಸರ್ಕಾರ ತೀರ್ಮಾನ ಕೈಗೊಂಡಿದೆ. ನಿಗದಿತ ದಿನಾಂಕದಂದೇ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವರ್ಷದ ಹಿಂದೆ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಅಗತ್ಯ ಸೌಲಭ್ಯ ಇರಲಿಲ್ಲ. ಮಾಸ್ಕ್, ಸ್ಯಾನಿಟೈಸರ್, ಚಿಕಿತ್ಸೆ ಎಲ್ಲವನ್ನು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಈಗ ಸೋಂಕಿನ ವಿರುದ್ಧ ಸೆಣೆಸಲು ಅಗತ್ಯ ಅಸ್ತ್ರಗಳಿವೆ. ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ ಎಂಬುದನ್ನು ಮರೆಯಬಾರದು’ ಎಂದು ಸಲಹೆ ನೀಡಿದರು.
ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿಕೊಂಡ ಹೋರಾಟಗಾರನಿಗೆ ಅಂತಃಕರಣ ಹಾಗೂ ಸಮಾಜದ ಬಗ್ಗೆ ಕಾಳಜಿ ಇರಬೇಕು. ಸಾರಿಗೆ ಬಸ್ ಸಂಚರಿಸಿಸದೇ ಇರುವಾಗಲೂ ನೌಕರರಿಗೆ ವೇತನ ನೀಡಲಾಗಿದೆ. ಒಂಬತ್ತು ಬೇಡಿಕೆಗಳ ಪೈಕಿ ವೇತನ ಪರಿಷ್ಕರಣೆ ಬಿಟ್ಟು ಇನ್ನೂಳಿದ ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದರೂ, ಈ ರೀತಿ ಹಠ ಹಿಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.