ಚಿತ್ರದುರ್ಗ: ಕೊರೊನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ಇದೀಗ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದ ವತಿಯಿಂದ ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಚಿತ್ರದುರ್ಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ ಹೊಸ ಮಾರ್ಗಸೂಚಿಯು ಮೇ 10 ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಸರ್ಕಾರದ ಆದೇಶದ ಅನುಬಂಧದಲ್ಲಿ ಪ್ರಸ್ತಾಪಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಅಂತರ ಹಾಗೂ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮುಂದುವರೆಸಲು ಅವಕಾಶ ನೀಡಲಾಗಿದೆ.
ವೈಯಕ್ತಿಕ ಓಡಾಟಗಳು, ಅನಿವಾರ್ಯವಲ್ಲದ ಚಟುವಟಿಕೆಗಳ ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ನಿಷೇಧಿಸಿ ಸೆಕ್ಷನ್ 144 ಜಾರಿಗೊಳಿಸಲಾಗಿರುತ್ತದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುತ್ತದೆ. ಈ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಗೆ ಬರುವ ಎಲ್ಲಾ ಮಾರ್ಗಗಳಿಗೂ ಬಂದೋಬಸ್ತ್ ಮಾಡಿ, ನಗರ ಪ್ರದೇಶಗಳಲ್ಲಿ ಸಾರ್ವಜನಿಕರು ಅನವಶ್ಯಕವಾಗಿ ಓಡಾಡದಂತೆ ಹಲವಾರು ಪ್ರದೇಶಗಳಲ್ಲಿ ಬ್ಯಾರಿಕೇಡ್ ಅಳವಡಿಸಿದೆ.
ಓದಿ:ಸೋಂಕಿತನಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಕೊಟ್ಟಿದ್ದೇನೆಂದ ವೈದ್ಯ - ಇಲ್ಲ ಎಂದ ಸಂಬಂಧಿಕ: ಆಸ್ಪತ್ರೆಯಲ್ಲಿ ರಂಪಾಟ