ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಹಾಗೂ ಕೊರೊನಾ ಆಸ್ಪತ್ರೆಗಾಗಿ ಡಿಎಂಎಫ್ ನಿಧಿಯಿಂದ 23.55 ಕೋಟಿ ರೂ. ಅನುದಾನವನ್ನು ಖರ್ಚು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಕೊರೊನಾ ಆಸ್ಪತ್ರೆಗಾಗಿ ಡಿಎಂಎಫ್ ನಿಧಿಯಿಂದ 23 ಕೋಟಿ ಅನುದಾನ: ಸಚಿವ ಶ್ರೀರಾಮುಲು - Chitradurga latest news
ಚಿತ್ರದುರ್ಗದ ಕೊರೊನಾ ಆಸ್ಪತ್ರೆಗಾಗಿ ಡಿಎಂಎಫ್ ನಿಧಿಯಿಂದ 23.55 ಕೋಟಿ ರೂ. ಅನುದಾನವನ್ನು ಖರ್ಚು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಶಾಸಕರು ನೀಡಿದ ಕ್ರಿಯಾ ಯೋಜನೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದು, ಡಿಎಂಎಫ್ ನಿಧಿಯಿಂದ ಹಂತ ಹಂತವಾಗಿ 141 ಕೋಟಿ ರೂಪಾಯಿಯನ್ನು ಖರ್ಚು ಮಾಡುವ ಉದ್ದೇಶ ಹೊಂದಲಾಗಿದೆ. ಇದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬಾಧಿತ ಪ್ರದೇಶಗಳಿಗೆ ತಲಾ ಶೇ. 50ರಷ್ಟು ಹಣ ಖರ್ಚು ಮಾಡಲು ಅವಕಾಶವಿದೆ. ಇದಕ್ಕೆ ಸಮಿತಿಯ ಶಾಸಕರು ಕೂಡ ಒಪ್ಪಿಗೆ ನೀಡಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ, ಪರಿಸರ ಸಂರಕ್ಷಣೆ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಕೋವಿಡ್-19 ನಿಯಂತ್ರಣಕ್ಕಾಗಿ ಮೀಸಲಿಟ್ಟಿರುವ ಹಣವನ್ನು ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಬಳಕೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೋವಿಡ್-19ಗೆ ಸಂಬಂಧಪಟ್ಟಂತೆ ಜಿಲ್ಲೆಗೆ ಒಂದು ಪ್ರಯೋಗಾಲಯದ ಅವಶ್ಯಕತೆ ಇದ್ದು, ರಾಜ್ಯದಲ್ಲಿ 32 ಪ್ರಯೋಗಾಲಯಗಳನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪರೀಕ್ಷೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಕೊರೊನಾ ಪರೀಕ್ಷೆಗೆ ಸಂಬಂಧಪಟ್ಟಂತೆ 6ರಿಂದ 7 ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಯಬೇಕು. ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಯೋಗಾಲಯಗಳ ಆರಂಭಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.