ಚಿತ್ರದುರ್ಗ:ರಾಜ್ಯ ಸರ್ಕಾರ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿದೆ. ಆದ್ರೂ ಕೆಲವು ಭಾಗಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿದೆ. ಈ ಮಧ್ಯೆ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಹೌದು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹಾಗೂ ಚಳ್ಳಕೆರೆ ಸೇರಿದಂತೆ ಹಲವು ಭಾಗಗಳಲ್ಲಿ ಹಾಡುಹಗಲೇ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿದೆ ಎನ್ನಲಾಗಿದೆ. ಕಡಿವಾಣ ಹಾಕಬೇಕಾದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ಹಾಡುಹಗಲೇ ಹರಿಯುವ ನೀರಿನಲ್ಲಿ ಜೆಸಿಬಿ ಮೂಲಕ ಅಪಾರ ಪ್ರಮಾಣದ ಮರಳನ್ನು ಉಳ್ಳವರು ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ. ಇನ್ನು ಮರಳು ದಂಧೆಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
ಇತ್ತ ಹರಿವ ನೀರಿನಲ್ಲಿ ಮರಳು ಎತ್ತಬಾರದು ಎಂಬ ಸರ್ಕಾರದ ನಿಯಮವಿದ್ದರೂ ಕೆಲ್ಲೋಡು ಗ್ರಾಮದಲ್ಲಿ ಮಾತ್ರ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ರೈತರು ಚಕ್ಕಡಿ ಬಂಡಿ ಮೂಲಕ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ.
ಮರಳು ದಂಧೆ ಸ್ಥಳಕ್ಕೆ ಶಾಸಕ ಭೇಟಿ ನೀಡಿ ಪರಿಶೀಲನೆ
ಮರಳು ದಂಧೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರ ಒತ್ತಾಯದ ಮೇರೆಗೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಗೋರ್ಲತ್ತು, ಕರಮರಹಳ್ಳಿ ಹಾಗೂ ನಾರಾಯಣಪುರ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮರಳು ದಂಧೆಗೆ ಕಡಿವಾಣ ಹಾಕುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.