ಚಿತ್ರದುರ್ಗ: ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದರು. ಈ ವೇಳೆ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ದಲಿತ - ಹಿಂದುಳಿದ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ನೀಡಿ : ಮಾದಾರ ಚೆನ್ನಯ್ಯ ಸ್ವಾಮೀಜಿ ಮನವಿ - ಡಿಸಿಎಂ ಗೋವಿಂದ ಕಾರಜೋಳ
ಕೊರೊನಾ ಹಾಗೂ ಲಾಕ್ಡೌನ್ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ಇದೀಗ ದಲಿತ- ಹಿಂದುಳಿದ ಸಮುದಾಯದ ಜನರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮನವಿ ಮಾಡಿದ್ದಾರೆ. ಇಲ್ಲಿನ ಮಠಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿದ್ದ ವೇಳೆ, ಈ ಮನವಿ ಮಾಡಿದ್ದಾರೆ.
ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿರುವ ಮಾದಾರ ಚೆನ್ನಯ್ಯ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀಗಳೊಂದಿಗೆ ಕೆಲಕಾಲ ಚರ್ಚಿಸಿದರು. ಇದೇ ವೇಳೆ, ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುತ್ತಿರುವ ದಲಿತ ಹಾಗೂ ಹಿಂದುಳಿದ ಸಮುದಾಯದ ಜನರು ದುಡಿಮೆ ಇಲ್ಲದೇ ಹೈರಾಣಾಗಿದ್ದಾರೆ. ರಾಜ್ಯದಲ್ಲಿರುವಂತಹ ದಲಿತ ಮತ್ತು ಹಿಂದುಳಿದ ಸಮುದಾಯದ ಜನರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶ್ರೀಗಳು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದರು.
ಶ್ರೀಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಸಿಎಂ ಇದರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ವಾಮೀಜಿಗೆ ಭರವಸೆ ನೀಡಿದರು.