ಚಿತ್ರದುರ್ಗ: ಹೊಸ ವರ್ಷದ ಸಂಭ್ರಮಾಚರಣೆ ಹೆಸರಿನಲ್ಲಿ ಸರ್ಕಾರದ ನಿಯಮ ಗಾಳಿಗೆ ತೂರಿ ಸಾರ್ವಜನಿಕರು ಅನುಚಿತವಾಗಿ ವರ್ತಿಸಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಜಿ. ರಾಧಿಕಾ ಎಚ್ಚರಿಸಿದ್ದಾರೆ.
ಹೊಸ ವರ್ಷಾಚರಣೆಯಲ್ಲಿ ನಿಯಮ ಮೀರಿದ್ರೆ ಕ್ರಮ: ಚಿತ್ರದುರ್ಗ ಎಸ್ಪಿ ರಾಧಿಕಾ
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡುವುದು,ಪಾರ್ಟಿ ಮಾಡುವುದು ಎಲ್ಲವುಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಕೊರೊನಾ ಹಾವಳಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದ ಹಿನ್ನೆಲೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಚಿತ್ರದುರ್ಗ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಮುಂದಾಗಿದೆ.
ನಗರದ ಎಸ್ಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವುದು, ಡಿಜೆ ಹಾಕುವುದು, ಹೋಟೆಲ್, ಪಬ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗುಂಪಾಗಿ ಸೇರಿ ಪಾರ್ಟಿ ಮಾಡುವುದನ್ನು ಸರ್ಕಾರ ನಿಷೇಧಿಸಿದೆ. ವಿಧಿಸಿದ್ದು, ಯಾರಾದರೂ ನಿಯಮಗಳನ್ನು ಗಾಳಿಗೆ ತೂರಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ.
ಪ್ರವಾಸಿ ತಾಣಗಳಲ್ಲಿ ಹೊಸ ವರ್ಷದ ಹೆಸರಿನಲ್ಲಿ ಸಂಭ್ರಮಕ್ಕೂ ಕಡಿವಾಣ ಹಾಕಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವ ಜನರ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಅನುಚಿತವಾಗಿ ಸಾರ್ವಜನಿಕರಿಗೆ ತೊಂದರೆ ಮಾಡುವುದು. ಕೊರೊನಾ ವೈರಸ್ ತಡೆಗೆ ಸರ್ಕಾರ ಜಾರಿ ಮಾಡಿದ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.