ಚಿತ್ರದುರ್ಗ:ಕಳೆದ ವರ್ಷಕ್ಕೆ ಹೋಲಿಸಿದಾಗ ಈ ವರ್ಷ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಪ್ರಕರಣಗಳು ಹೆಚ್ಚು ಕಂಡು ಬಂದಿದ್ದು, ಸೊಳ್ಳೆಗಳಿಂದ ಹರಡುವ ಈ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಸಮುದಾಯಕ್ಕೆ ಆರೋಗ್ಯ ಶಿಕ್ಷಣ ನೀಡಲು ಹೆಚ್ಚಿನ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಡೆಂಗ್ಯೂ, ಚಿಕುನ್ ಗುನ್ಯಾ, ಮಲೇರಿಯಾ ರೋಗ ತಡೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ವಿಷಯದಲ್ಲಿಯೇ ಅಧಿಕಾರಿಗಳು ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿದ್ದು, ಉಳಿದಂತೆ ಜನರಿಗೆ ಮಾರಕವಾಗಬಹುದಾದ ಡೆಂಗ್ಯೂ, ಚಿಕುನ್ ಗುನ್ಯಾ ರೋಗ ನಿಯಂತ್ರಣ ಕುರಿತಂತೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಕಳೆದ ವರ್ಷ ಜಿಲ್ಲೆಯಲ್ಲಿ ಒಟ್ಟು 438 ಡೆಂಗ್ಯೂ ಹಾಗೂ 196 ಚಿಕುನ್ ಗುನ್ಯಾ, 9 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದವು.