ಸುಳ್ಯ: ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಯುವ ನಾಯಕ ಆಗಿರುವ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಂತರ ಪ್ರವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದುರಾದೃಷ್ಟವಶಾತ್ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.