ಮಂಗಳೂರು:ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ಮಾಡಿ ಒಟ್ಟು 71,28,500 ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
2020 ಜುಲೈ ಮತ್ತು ಆಗಸ್ಟ್ ನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮರಳು ಅಡ್ಡೆಗಳಿಗೆ ದಾಳಿ ಮಾಡಲಾಗಿದ್ದು, ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ. 10 ಆರೋಪಗಳನ್ನು ದಸ್ತಗಿರಿ ಮಾಡಿ 14 ಮರಳು ಸಾಗಾಟ ವಾಹನ ಮತ್ತು 2 ಡ್ರೆಜ್ಜಿಂಗ್ ಯಂತ್ರಗಳನ್ನು ಸ್ವಾಧೀನ ಪಡಿಸಿಕೊಂಡು 71,28,500 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮಾದಕ ದ್ರವ್ಯಗಳ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದು, 10 ಆರೋಪಿಗಳನ್ನು ದಸ್ತಗಿರಿ ಮಾಡಿ 14,80,000 ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತಗಳ ಮಾರಾಟ ಮತ್ತು ಸಾಗಾಟ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು ನಗರದಲ್ಲಿ ಯಾವುದೇ ರೀತಿಯ ಮಾದಕ ವಸ್ತಗಳ ಮಾರಾಟ ಮತ್ತು ಸಾಗಾಟ, ಅಕ್ರಮ ಮರಳುಗಾರಿಕೆ ದಂಧೆ ಚಟುವಟಿಕೆಗಳು ನಡೆಯುತ್ತಿರುವುದು ಕಂಡ ಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಈ ಬಗ್ಗೆ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶುಗಿರಿ (9480802304), ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ (9480802305), ನಗರ ಪೊಲೀಸ್ ಕಂಟ್ರೋಲ್ ರೂಂ (9480802321) ನ್ನು ಸಂಪರ್ಕಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.