ಮಂಗಳೂರು(ದಕ್ಷಿಣ ಕನ್ನಡ): ಭಾರತದ ಭವಿಷ್ಯವು ಸಂಸ್ಕೃತಿಯ ಉಳಿಯುವಿಕೆಯ ಮೇಲೆ ನಿರ್ಧರಿತವಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸದಾ ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಐದನೇ ದಿನ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣದ ಜತೆಗೆ ಬೌದ್ಧಿಕ ಜ್ಞಾನ ಅಗತ್ಯ. ಶಿಸ್ತು, ಜೀವನ ಮೌಲ್ಯವನ್ನು ಸಮಂಜಸವಾಗಿ ತಿಳಿಸಿದರೇ ಮಗು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗುತ್ತಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ಹುಟ್ಟಿಕೊಂಡ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಇದೀಗ ಸಂಸ್ಕೃತಿ ಬಿಂಬಿಸುವ ಹಲವು ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದೆ. ಈ ಮೂಲಕ ಭಾರತೀಯ ಪರಂಪರೆಯ ಉಳಿವಿಕೆಗೆ ಹಾಗೂ ಭವ್ಯ ಭಾರತ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದೆ. ಈ ಮೂಲಕ ಸಂಸ್ಕೃತಿಯ ಚಳವಳಿ ಆರಂಭಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಕ್ರೀಡಾ ಸಚಿವ ನಾರಯಣ ಗೌಡ, ಭಾರತ್ ಸೌಟ್ಸ್ -ಗೈಡ್ಸ್ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಅನಿಲ್ ಕುಮಾರ್ ಜೈನ್, ಕರ್ನಾಟಕ ರಾಜ್ಯ ಸೌಟ್ಸ್ ಗೈಡ್ಸ್ ಆಯುಕ್ತ ಪಿ.ಜಿ ಆರ್ ಸಿಂದ್ಯಾ, ಪಶ್ಚಿಮ ವಲಯದ ಐಜಿಪಿ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ ಆರ್, ಉದ್ಯಮಿ ಶ್ರೀಪತಿ ಭಟ್, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ:ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದ್ದರು. 7 ದಿನಗಳ ಕಾಲ ನಡೆಯುವ ಈ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದೇಶ, ವಿದೇಶಗಳ 50 ಸಾವಿರ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರೋವರ್ಸ್, ರೇಂಜರ್ಸ್ ಹಾಗೂ ದಳಪತಿಗಳು ಭಾಗವಹಿಸಿದ್ದಾರೆ. 10 ಸಾವಿರ ತರಬೇತುದಾರರು, 3 ಸಾವಿರ ಕಲಾವಿದರು, 3 ಸಾವಿರ ಸ್ವಯಂ ಸೇವಕರು ಕೂಡ ಜಾಂಬೂರಿಯಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಅದ್ಧೂರಿ ಚಾಲನೆ