ಸುಳ್ಯ, ದಕ್ಷಿಣ ಕನ್ನಡ:ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಕುಚ್ಚಲಕ್ಕಿ (Brown Rice) ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮಾ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ (MSP) ಖರೀದಿ ಮಾಡಲಿದೆ.
ನಂತರ ಎಂಎಸ್ಪಿಯಿಂದ ಖರೀದಿಸಿದ ಕುಚ್ಚಲಕ್ಕಿಯನ್ನು ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂಬುದಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಸ್ಥಳೀಯ ರೈತರ ಹಾಗೂ ದಕ್ಷಿಣ ಕನ್ನಡ, ಉಡುಪಿ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರಿಗೆ ಶೋಭಾ ಕರಂಜ್ಲಾಜೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ:ವಾರಾಂತ್ಯದ ಕರ್ಪ್ಯೂ: ಘಾಟಿ ಸುಬ್ರಮಣ್ಯಸ್ವಾಮಿ ಬ್ರಹ್ಮ ರಥೋತ್ಸವ ರದ್ದು