ಮಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಿಂದ ಕಾರ್ಮಿಕರ ವರ್ಗ ಬದುಕಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದರು.
ಸಿಐಟಿಯು ದ.ಕ.ಜಿಲ್ಲಾ ಸಮಿತಿಯಿಂದ ಪ್ರತಿಭಟನೆ 'ವಿಧಾನಸೌಧ ಚಲೋ' ಕಾರ್ಯಕ್ರಮದ ಅಂಗವಾಗಿ ಸಿಐಟಿಯು ದ.ಕ.ಜಿಲ್ಲಾ ಸಮಿತಿಯಿಂದ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನಾ ಪ್ರದರ್ಶನದ ನೇತೃತ್ವ ವಹಿಸಿ ಮಾತನಾಡಿದ ಅವರು, ಕಾರ್ಮಿಕ ಕಾನೂನುಗಳನ್ನು ರಕ್ಷಣೆ ಮಾಡಲು ಸಾಧ್ಯವಾಗಬೇಕು. ಅಲ್ಲದೆ ಕಾರ್ಮಿಕ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ದೊರೆತಿಲ್ಲ. ಹಾಗಾದಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ಪರಿಹಾರ ಹಾಗೂ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿರುವ 2 ಸಾವಿರ ಕೋಟಿ ರೂ. ಪರಿಹಾರ ಯಾರಿಗೆ ಎಂದು ಪ್ರಶ್ನೆ ಮಾಡಬೇಕಾಗಿದೆ. ಅಸಂಘಟಿತ ಕ್ಷೇತ್ರದ ಯಾವುದೇ ಕಾರ್ಮಿಕರಿಗೆ ಪರಿಹಾರ ದೊರಕಿಲ್ಲ. ದ.ಕ. ಜಿಲ್ಲೆಯಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ, ಸಾರಿಗೆ ನೌಕರರಿಗೆ, ಬೀದಿ ಬದಿ ವ್ಯಾಪಾರಸ್ಥರಿಗೆ, ಹಮಾಲಿ ಕಾರ್ಮಿಕರಿಗೆ ಯಾವುದೇ ಪರಿಹಾರ ದೊರಕಿಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ದೊರಕಿರುವ ಹಣವೇ ಇನ್ನೂ ಸಿಗಲಿಲ್ಲ. ಸರ್ಕಾರ ಸಂಪೂರ್ಣ ಬೊಗಳೆ ಬಿಡುತ್ತಿದೆ ಎಂದು ಸುನೀಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಜನರ ಕೈಯಲ್ಲಿ ಹಣವಿಲ್ಲ. ಆದರೆ ಎಲ್ಲಾ ವಸ್ತುಗಳಿಗೂ ಬೆಲೆ ಮಾತ್ರ ಹೆಚ್ಚುತ್ತಲೇ ಇದೆ. ವಿದೇಶಗಳಲ್ಲಿ 25 ರೂ.ಗೆ ದೊರೆಯುವ ಪೆಟ್ರೋಲ್ ದರ ಭಾರತದಲ್ಲಿ 85 ರೂ.ಗೆ ಏರಿದೆ. ಆದರೆ ಜನರ ಸಂಕಷ್ಟಗಳಿಗೆ ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರ ಬಂಡವಾಳಗಾರರು, ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಲು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಆದರೆ ಸರ್ಕಾರ ಮಾತ್ರ ಜನರಿಗೆ ಬೇಕಾದ ಕಾನೂನು ಮಾಡುತ್ತಿದ್ದೇವೆ ಎಂದು ಹೇಳಿ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಆದ್ದರಿಂದ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಉದ್ದಗಲಕ್ಕೆ ಪ್ರತಿಭಟನೆ, ಮುಷ್ಕರ ನಡೆಯುತ್ತಿದೆ ಎಂದರು.