ಬಂಟ್ವಾಳ: ಕಾಂಗ್ರೆಸ್ ಪಕ್ಷ ನೀಡುವ ಜವಾಬ್ದಾರಿಗೆ ಬದ್ಧ, ಸಕ್ರಿಯ ರಾಜಕಾರಣದಲ್ಲಿರುತ್ತೇನೆ, ಲೋಕಸಭಾ ಚುನಾವಣೆಗೆ ಈಗಿಂದಲೇ ತಯಾರಿ ಆರಂಭಿಸಲಾಗುವುದು ಎಂದು ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷವನ್ನು ಸಂಘಟನಾತ್ಮಕ ಮಟ್ಟದಲ್ಲಿ ಬೆಳೆಸುವ ಕಾರ್ಯವನ್ನು ಮಾಡುತ್ತೇನೆ. ಪಕ್ಷದ ವರಿಷ್ಠರು ನೀಡುವ ಸೂಚನೆ ಪಾಲಿಸುತ್ತೇನೆ.
ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷಕ್ಕೆ ನನ್ನಿಂದ ಸಹಾಯ ಆಗುತ್ತದೆ ಎನ್ನುವುದಾದರೆ, ನಾನು ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಿರೀಕ್ಷಿತ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಪ್ರತಿಕೂಲ ಪರಿಸ್ಥಿತಿಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಭಿಪ್ರಾಯ ತಿಳಿಸಿದರು.
ತನಗೆ ವಯಸ್ಸಾಯಿತು ಎಂದು ಕೆಲವರು ಅಪಪ್ರಚಾರ ಮಾಡಿದರು. ನಾನು ಗೆದ್ದರೆ, ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುತ್ತೇನೆ ಎಂಬ ಭೀತಿಯಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮರಳು ದಂಧೆಕೋರರು ನನ್ನ ಸೋಲಿಗೆ ಶ್ರಮಿಸಿದ್ದಾರೆ ಎಂದ ಅವರು, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸೋಲಿನ ಪರಾಮರ್ಶೆಯನ್ನು ಮಾಡುತ್ತೇನೆ. ಅವರೊಂದಿಗೆ ನನ್ನ ಮನದಾಳದ ಮಾತನ್ನು ಬಿಚ್ಚಿಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ನನಗೆ ಪೂರ್ವಜರಿಂದ ಬಂದ ಬಳುವಳಿಯಿಂದ ಸಣ್ಣ ಮಟ್ಟಿನ ಕೃಷಿ ಮಾಡುತ್ತಿದ್ದೇನೆ. ನಾನು ಎಲ್ಲಿಂದಲೋ ಬಂದು ಚುನಾವಣೆಗೆ ನಿಂತಿಲ್ಲ . ಈಗ ನಮ್ಮದೇ ಸರಕಾರ ಇದ್ದು, ಬಂಟ್ವಾಳ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ತಿ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ವಿವರಿಸಿದರು.