ಮಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ಸೇರಿದಂತೆ ಗಡಿಭಾಗದ ಪ್ರದೇಶದಿಂದ ವ್ಯಾಪಾರ, ಉದ್ಯೋಗ ಇನ್ನಿತರ ಕಾರ್ಯಗಳ ನಿಮಿತ್ತ ನಗರ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಗಾಗಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಹೇಳಿದರು.
ಗಡಿಭಾಗದಿಂದ ಮಂಗಳೂರು ಪ್ರವೇಶಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ
ಕಾಸರಗೋಡು ಸೇರಿದಂತೆ ಗಡಿಭಾಗದ ಪ್ರದೇಶದಿಂದ ವ್ಯಾಪಾರ, ಉದ್ಯೋಗ ಇನ್ನಿತರ ಕಾರ್ಯಗಳ ನಿಮಿತ್ತ ಮಂಗಳೂರಿಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಗಾಗಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಕೋವಿಡ್-19 ಲಸಿಕೆಯ ಬಗ್ಗೆ ಪೂರ್ವ ತಯಾರಿ ಅಂಗವಾಗಿ ನಡೆದ ನಗರ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಮ.ನ.ಪಾ. ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡಬೇಕು ಎಂದು ಸೂಚಿಸಿದರು.
ಹಬ್ಬ, ಜಾತ್ರಾ ಮಹೋತ್ಸವ ಇರುವುದರಿಂದ ನಗರದ ಮಾರುಕಟ್ಟೆ, ಬೀದಿಬದಿ ವ್ಯಾಪಾರಿಗಳು ಹಾಗೂ ಬಂದರು ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟಿಗೆ ಹೆಚ್ಚು ಜನಸಂದಣಿ ಇರುತ್ತದೆ. ಈ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುವ ಸಂಭವ ಇದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವ್ಯಾಪಾರಿಗಳಿಗೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಯನ್ನು ಮಾಡಬೇಕು ಎಂದು ಹೇಳಿದರು.