ಕಡಬ (ದಕ್ಷಿಣ ಕನ್ನಡ) : ಸುಮಾರು ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಕಡಬ ತಾಲೂಕಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. 2012 ರಲ್ಲಿ ಕಡಬ ತಾಲೂಕಿನ ಗ್ರಾಮವೊಂದರ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದು, ಬಳಿಕ ಈತ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಹೀಗಾಗಿ ನಾಲ್ಕು ತಿಂಗಳ ಹಿಂದೆ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆ ನಂತರ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 2ನೇ ಎಸಿಜೆ ಮತ್ತು ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರು ಆರೋಪಿಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1500 ರೂ. ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಅವರು ವಾದಿಸಿದ್ದರು.
ಅಪ್ತಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಅಪ್ತಾಪ್ತೆ ಮೇಲೆ ಬೇರೆ ಬೇರೆ ಸಂದರ್ಭದಲ್ಲಿ ಯುವಕರು ಲೈಂಗಿಕ ದೌರ್ಜನ್ಯ ವೆಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಕೇರಳದ ಕೆಲವು ಯುವಕರು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ಮನೆಗೆ ಬರುವಾಗ ತಡವಾದ ಕುರಿತು ವಿಚಾರಿಸಿದಾಗ ಆಕೆ ನಡೆದ ಘಟನೆ ಬಗ್ಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.