ಮಂಗಳೂರು: 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಬಸ್ತಿಗುಡ್ಡೆಯ ಮೊಹಮ್ಮದ್ ಹಫೀಝ್ (35), ಸಜಿಪ ಮುನ್ನೂರು ಗ್ರಾಮದ ನಂದಾವರದ ಅಮೀರ್ (34) ಹಾಗೂ ಸಜಿಪ ಮುನ್ನೂರು ಗ್ರಾಮದ ಪಾಣೆಮಂಗಳೂರು ದಾಸರಗುಡ್ಡೆಯ ಜಾಕೀರ್ ಹುಸೇನ್ (28) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿಕೊಂಡು ಬಂದು ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ತಲಪಾಡಿ - ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಎಂಬಲ್ಲಿ ಕಾರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ, ಒಂದು ಮಾರುತಿ ಸ್ವಿಫ್ಟ್ ಕಾರು, 70,000 ರೂ. ಮೌಲ್ಯದ 3 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.