ಮಂಗಳೂರು:ಪ್ರವಾಹ, ಅತಿವೃಷ್ಟಿ ಸೇರಿದಂತೆ ಮತ್ತಿತರ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.
ಮುಂಗಾರು ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಬರುವ ಮುಂಗಾರು ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಪ್ರಾಣ ಹಾನಿಯಾಗದಂತೆ, ಸಾರ್ವಜನಿಕ ಆಸ್ತಿ-ಪಾಸ್ತಿ, ಖಾಸಗಿ ಸ್ವತ್ತುಗಳಿಗೆ ಹಾನಿ ಉಂಟಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜೂನ್ 14ರ ನಂತರ ಮುಂಗಾರು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಾನಿಗೊಳಗಾದ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಒದಗಿಸಬೇಕು. ಅಂತಹ ಸಂದರ್ಭದಲ್ಲಿ ಯಾವುದೇ ಅರ್ಹ ವ್ಯಕ್ತಿಯು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಹೆಚ್ಚಿನ ಮಳೆಯಿಂದ ತೊಂದರೆಗೊಳಗಾಗುವ ಸಾಧ್ಯತೆಗಳು ಕಂಡುಬಂದಾಗ ಕೂಡಲೇ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅಗತ್ಯ ಮೂಲಭೂತ ಸೌಕರ್ಯಒದಗಿಸಬೇಕು. ಕೊರೊನಾ ಸೋಂಕಿತರಿದ್ದಲ್ಲಿ ಕಡ್ಡಾಯವಾಗಿ ಕೊರೊನಾ ಕೇರ್ ಸೆಂಟರ್ಗಳಿಗೆ ವರ್ಗಾಯಿಸಬೇಕು. ಹೋಮ್‍ಗಾರ್ಡ್ ಕಮಾಂಡೆಂಟ್‍ರವರು ಸಮುದ್ರದ ತೀರದ ಜವಾಬ್ದಾರಿ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ನೆರೆ ಹಾವಳಿಯ ಕುರಿತು ಅಣಕು ಪ್ರದರ್ಶನ ಮಾಡುವುದರ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಒಳ ಚರಂಡಿಗಳು ಮತ್ತು ಹೊಂಡಗಳನ್ನು ಸರಿಯಾಗಿ ಸ್ವಚ್ಛತೆ ಮಾಡಬೇಕು. ಇಲ್ಲದಿದ್ದರೆ ಮಳೆ ಬಂದು ನೀರು ರಸ್ತೆಯಲ್ಲಿ ನಿಲ್ಲುವ ಸಂದರ್ಭಗಳು ಎದುರಾಗಿ ಮನೆಗಳಿಗೆ ನೀರು ನುಗ್ಗುವ ಸಂಭವಗಳು ಇರುತ್ತವೆ. ಹೀಗಾಗದಂತೆ ಎಚ್ಚರ ವಹಿಸಬೇಕು. ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿಗಳು ನೆರೆಹಾವಳಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ, ನೆರೆ ಹಾವಳಿಯಾದಾಗ ಅಲ್ಲಿ ವಾಸಿಸುವ ಕುಟುಂಬಗಳನ್ನು ಆದಷ್ಟು ಶೀಘ್ರವಾಗಿ ಕಾಳಜಿ ಕೇಂದ್ರಗಳಿಗೆ ವರ್ಗಾಹಿಸಬೇಕು ಎಂದರು.