ಕರ್ನಾಟಕ

karnataka

ETV Bharat / state

ಎಸ್ಎಸ್ಎಲ್​ಸಿ ಪರೀಕ್ಷಾ ಕೊಠಡಿಗಳಿಗೆ ನಿತ್ಯ ಸ್ಯಾನಿಟೈಸೇಶನ್; ಡಿಸಿ - DC meeting in mangalore

ಇಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಅಧಿಕಾರಿಗಳು, ಶಿಕ್ಷಕರ‌ ಜೊತೆ ಸಭೆ ನಡೆಸಿದರು.

DC meeting
DC meeting

By

Published : Jun 20, 2020, 11:23 PM IST

ಮಂಗಳೂರು: ಎಸ್ಎಸ್ಎಲ್​​ಸಿ ಪರೀಕ್ಷೆ ಸಂದರ್ಭದಲ್ಲಿ ಕೊರೊನಾದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕಾಪಾಡುವ ಹಿನ್ನೆಲೆಯಲ್ಲಿ ಪ್ರತೀ ಕೇಂದ್ರಗಳ ಪ್ರತಿಯೊಂದು ಕೊಠಡಿಗಳನ್ನು ನಿತ್ಯವೂ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನ್ ಮೂಲಕ ಪರೀಕ್ಷಿಸಿ ನಂತರದಲ್ಲಿ ಕೊಠಡಿಗೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ನಗರದ ಕಪಿತಾನಿಯೋ ಪ್ರೌಢಶಾಲೆಯಲ್ಲಿ ನಡೆದ ಎಸ್ಎಸ್ಎಲ್​​ಸಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಪೂರ್ವಸಿದ್ಧತೆ ಕ್ರಮಗಳ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ‌ರು.

ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಭಯ ಬೇಡ. ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದರು.

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಊಟ ಮತ್ತು ನೀರನ್ನು ಕಡ್ಡಾಯವಾಗಿ ತರಬೇಕು. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಪಾಲಿಸಬೇಕು. ಕೊರೊನಾ ಮಾರ್ಗಸೂಚಿಯನ್ನು ಅನುಸರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಕೊಠಡಿಗಳ ವ್ಯವಸ್ಥೆ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಾಸ್ಕ್ ಧರಿಸದೆ ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಬೇಕು ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಉಚಿತ ಬಸ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಗಡಿ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಬರುವಂತೆ ಆಯಾ ಶಾಲೆಯ ಶಿಕ್ಷಕರು ಜವಾಬ್ದಾರಿ ವಹಿಸಬೇಕು. ಎಲ್ಲಾ ಕೊಠಡಿಗಳಿಗೂ ಜನರೇಟರ್, ಸಿ.ಸಿ.ಕ್ಯಾಮರಾ ಅಳವಡಿಕೆ ಮಾಡುವ ಜೊತೆಗೆ ಶಾಲೆಯಲ್ಲಿ ಶೌಚಾಲಯ ಸ್ವಚ್ಛವಾಗಿರಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್‍ಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹೇಳಿದರು.

ಶೀತ, ನೆಗಡಿ, ಕೆಮ್ಮು ಸೇರಿದಂತೆ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಸಂಬಂಧಿಸಿದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಇದರ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರದ್ದು ಆಗಿರುತ್ತದೆ ಎಂದು ಹೇಳಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಡಿಡಿಪಿಐ ಮಲೇಶ್ ಸ್ವಾಮಿ, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details