ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲ ಘಟನೆಗಳಿಗೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಮಾದಕ ದ್ರವ್ಯ ಬಳಕೆಯೇ ಪ್ರಮುಖ ಕಾರಣ ಆಗಿರುವುದು ಗಮನಕ್ಕೆ ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತಂತೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಅಧೀಕ್ಷಕರೊಂದಿಗೆ ಸಭೆ ನಡೆಸಿದ ಸಚಿವರು, ಅನೈತಿಕ ಪೊಲೀಸ್ ಗಿರಿ, ಗುಂಡಾಗಿರಿ ಹಾಗೂ ಪ್ರಮುಖವಾಗಿ ಅಕ್ರಮ ಡ್ರಗ್ಸ್ ಬಳಕೆ ತಡೆಗಟ್ಟಲು ಜಂಟಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದಾರೆ.
ವಿಶೇಷವಾಗಿ ಅಕ್ರಮ ಮಾದಕ ದ್ರವ್ಯ ಬಳಕೆ ತಡೆಯಲು ಪೊಲೀಸ್ ಇಲಾಖೆಯು ಜಿಲ್ಲಾಡಳಿತದೊಂದಿಗೆ ಮತ್ತು ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಗುಂಡೂರಾವ್ ಸೂಚಿಸಿದರು. ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅಧಿಕಾರಿಗಳಿಗೆ ತಿಳಿಸಿದರು.
ಈ ನಿಟ್ಟಿನಲ್ಲಿ ಮಕ್ಕಳ ಪೋಷಕರ ಸಹಕಾರ ಕೋರಿರುವ ಸಚಿವರು, ಈ ಜಾಲದ ಹಿಂದೆ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿ ಕೈಜೋಡಿಸುತ್ತಿರುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಸಂಬಂಧಿಸಿದ ಸಿಬ್ಬಂದಿ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಗುಂಡೂರಾವ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಗೂಂಡಾಗಿರಿ ಹಾವಳಿ ನಿಗ್ರಹಿಸಲು ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಬೇಕು. ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲೂ ಯಾವುದೇ ಶಕ್ತಿಯಾದರೂ, ಕಾನೂನು ಕೈಗೆತ್ತಿಕೊಂಡಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವರು ಸೂಚಿಸಿದ್ದಾರೆ.