ಮಂಗಳೂರು: ಕೋವಿಡ್-19 ರ ಚಿಕಿತ್ಸಾ ಕ್ರಮಗಳ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಈ ಕಾರಣದಿಂದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ.ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಗಳಿಗೆ ಶನಿವಾರ ದ.ಕ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ದ.ಕ.ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಎರಡೂ ಆಸ್ಪತ್ರೆಗಳಲ್ಲೂ ಆಸ್ಪತ್ರೆಗಳ ಆಡಳಿತ ಮಂಡಳಿ ಮತ್ತು ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಕೋವಿಡ್ 19 ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳ ಬಗ್ಗೆ ಸರ್ಕಾರಕ್ಕೆ ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಆಡಳಿತ ಮಂಡಳಿಯು ಸರ್ಕಾರದ ಕಾರ್ಯಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಿ ಸಾರ್ವಜನಿಕರೊಂದಿಗೆ ಸಹಕರಿಸಬೇಕು ಎಂದು ಆಡಳಿತ ಮಂಡಳಿಗಳಿಗೆ ತಿಳಿಸಿದರು.