ಕರ್ನಾಟಕ

karnataka

ETV Bharat / state

ಕೊಲೆ ಪ್ರಕರಣದಲ್ಲಿ ಕಸ್ಟಡಿಯಿಂದ ತಪ್ಪಿಸಿಕೊಂಡ: 17 ವರ್ಷದ ಬಳಿಕ ಕಳ್ಳತನ ಪ್ರಕರಣದಲ್ಲಿ ಬಂಧನ - ವಿಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿ

ಮೈಸೂರಿನ ಗಂಗಮ್ಮ ಎನ್ನುವವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದನು.

Escaped from custody in murder case arrested in theft case after 17 years
ಕೊಲೆ ಪ್ರಕರಣದಲ್ಲಿ ಕಸ್ಟಡಿಯಿಂದ ತಪ್ಪಿಸಿಕೊಂಡಾತ 17 ವರ್ಷದ ಬಳಿಕ ಕಳ್ಳತನ ಪ್ರಕರಣದಲ್ಲಿ ಬಂಧನ

By

Published : Apr 17, 2023, 1:06 PM IST

Updated : Apr 17, 2023, 1:35 PM IST

ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್

ಮಂಗಳೂರು: ಮೈಸೂರಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡಾತನನ್ನು 17 ವರ್ಷಗಳ ಬಳಿಕ ಮನೆ ಕಳ್ಳತನ ಪ್ರಕರಣದಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಸಿದ್ಧರಾಜು ಯಾನೆ ಮೂರ್ತಿ ಯಾನೆ ಸೋನು ರಾಜ್ ಯಾನೆ ಸುಂದರ್ ರಾಜ್ ಯಾನೆ ಸಿದ್ಧ ಯಾನೆ ರೌಡಿ ಸಿದ್ದ ಯಾನೆ ಸಿದ್ದು ಯಾನೆ ಜ್ಞಾನಮೂರ್ತಿ (52) ಬಂಧಿತ ಆರೋಪಿ. ಈತ ಮೈಸೂರಿನ ಹೂಟಗಳ್ಳಿಯ ಮಾರಿಗುಡಿ ದೇವಸ್ಥಾನ ರಸ್ತೆಯ ನಿವಾಸಿಯಾಗಿದ್ದು, ಸದ್ಯ ಚಿಕ್ಕಬಾಣಾವರ, ಬೆಂಗಳೂರಿನಲ್ಲಿ ವಾಸವಾಗಿದ್ದಾನೆ.

ಮಂಗಳೂರು ನಗರದ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಸುಮಾರು ರೂ 15 ಲಕ್ಷ ರೂ ಮೌಲ್ಯದ 270 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮಂಗಳೂರು ನಗರ, ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಕಾರ್ಕಳ ಪೊಲೀಸ್ ಠಾಣೆಯ ಒಟ್ಟು 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಟ್ಟು 8 ಪ್ರಕರಣಗಳು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣಗಳಲ್ಲಿ ಮನೆ ಕಳ್ಳತನ ಮಾಡಿದ್ದು, ಮಂಗಳೂರಿನಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಮನೆ ಕಳ್ಳತನ, ಒಟ್ಟು 13 ಪ್ರಕರಣಗಳಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರಿನಲ್ಲಿ ಮನೆ ಕಳ್ಳತನ ಮಾಡಲು ಬಂದ ಸಮಯ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ಸಮಯ ಆರೋಪಿ ಆತನ ಸಹಚರನಾದ ಹಾಸನ ಜಿಲ್ಲೆಯ ಅರಕೂಲಗೂಡಿನ ಪುನೀತ್ ಎಂಬಾತನೊಂದಿಗೆ ಸೇರಿಕೊಂಡು ಹಲವಾರು ಕಡೆ ಯಾರೂ ಇಲ್ಲದ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು ಮಾಡಿರುವುದು ತಿಳಿದು ಬಂದಿದೆ.

ಈತ ಮೈಸೂರು ನಗರ ವಿಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2005ರಲ್ಲಿ ಗಂಗಮ್ಮ ಎಂಬ ಮಹಿಳೆಯ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ. ಮೈಸೂರಿನ ಮಂಟೆಲಿಂಗಯ್ಯ ಮತ್ತು ಇತರ ಆರೋಪಿಗಳೊಂದಿಗೆ ಸೇರಿಕೊಂಡು ಗಂಗಮ್ಮ ಎನ್ನುವವರನ್ನು ಅಪಹರಿಸಿ ಕೊಲೆ ಮಾಡಿ ಮೃತದೇಹವನ್ನು ಕಬಿನಿ ನದಿಗೆ ಎಸೆದಿದ್ದನು. ಈ ಪ್ರಕರಣ ದಾಖಲಾದ ಸಮಯ ಆತನ ಹೆಸರು ರೌಡಿ ಸಿದ್ದ ಎಂಬುದಾಗಿ ಇದ್ದು, ಕೊಲೆ ಪ್ರಕರಣದಲ್ಲಿ ದಸ್ತಗಿರಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದನು.

2006ರಲ್ಲಿ, ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಮಂಡ್ಯ ಜಿಲ್ಲೆಯ ಮದ್ದೂರು ಎಂಬಲ್ಲಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈವರೆಗೆ ಪತ್ತೆಯಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಎಲ್​ಪಿಸಿ ಬಂಧನ ವಾರಂಟ್​ ಇದೆ. ಕೊಲೆ ಪ್ರಕರಣದಲ್ಲಿ ಈತನೊಂದಿಗೆ ಇದ್ದ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿರುತ್ತದೆ. ಆರೋಪಿ ಈ ಹಿಂದೆ ಉಡುಪಿ ಜಿಲ್ಲೆಯ ಕೋಟ ಠಾಣೆ ಮತ್ತು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿ ಬಂಧನವಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಈತನ ವಿರುದ್ಧ ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ನಜರ್ ಬಾದ್ ಮತ್ತು ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ಮತ್ತು ಮನೆ ಕಳ್ಳತನ, ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ, ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಮತ್ತು ಕಳವು ಪ್ರಕರಣ ದಾಖಲಾಗಿದ್ದು, ಈತನ ವಿರುದ್ಧ ಮೇಟಗಳ್ಳಿ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಈತನು ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ಕಸ್ಟಡಿ ಎಸ್ಕೇಪ್ ಪ್ರಕರಣ ದಾಖಲಾಗಿದೆ.

ಈ ಮೇಲಿನ ಎಲ್ಲ ಪ್ರಕರಣಗಳಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ತಲೆಮರೆಸಿಕೊಂಡಿರುವ ಆರೋಪಿ ಎಂದು ಒಟ್ಟು 12 ಎಲ್​ಪಿಸಿ ವಾರಂಟ್​ ಇದೆ. ಮಂಗಳೂರು ನಗರದಲ್ಲಿ ಕಳ್ಳತನಕ್ಕೆ ಸಂಬಂಧಿಸಿದ 1 ಪ್ರಕರಣ ಹಾಗೂ ಮೈಸೂರು ಹಾಗೂ ಮಂಡ್ಯ ಜಿಲ್ಲೆಯ 10 ಠಾಣೆಗಳಲ್ಲಿ ಕೊಲೆ, ಅತ್ಯಾಚಾರ, ಕೊಲೆ ಯತ್ನ ಹಾಗೂ ಕಳ್ಳತನಕ್ಕೆ ಸಂಬಂಧಿಸಿದಂತೆ ಒಟ್ಟು 14 ಪ್ರಕರಣಗಳು, ಉಡುಪಿ ಜಿಲ್ಲೆಯಲ್ಲಿ 3 ಪೊಲೀಸ್‌ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು 3 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯಲ್ಲಿ 4 ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು 8 ಪ್ರಕರಣಗಳು, ಹಾಸನ ಜಿಲ್ಲೆಯಲ್ಲಿ 2 ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು 2 ಪ್ರಕರಣಗಳು ಸೇರಿ ಒಟ್ಟು 30 ಪ್ರಕರಣಗಳು ದಾಖಲಾಗಿವೆ.

ಆರೋಪಿಗಳನ್ನು ಬಂಧಿಸಿದ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್‌ ಆಯುಕ್ತ ಪಿ ಎ ಹೆಗಡೆ ಅವರ ನಿರ್ದೇಶನದ ಸಿಸಿಬಿ ಘಟಕದ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್​ ಎಂ ಹಾಗೂ ಪಿಎಸ್‌ಐ ಸುದೀಪ್ ಎಂ ವಿ ಮತ್ತು ಎ.ಎಸ್.ಐ ಶಶಿಧರ ಶೆಟ್ಟಿ ಹಾಗೂ ಸಿಬ್ಬಂದಿಗೆ 10 ಸಾವಿರ ರೂ ನಗದು ಬಹುಮಾನವನ್ನು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಘೋಷಿಸಿದ್ದಾರೆ.

ಇದನ್ನೂ ಓದಿ:ನಿವೃತ್ತ IPS​ ಅಧಿಕಾರಿ ಮನೆಯಲ್ಲಿ ಕಳ್ಳತನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ ನಾಪತ್ತೆ

Last Updated : Apr 17, 2023, 1:35 PM IST

ABOUT THE AUTHOR

...view details