ಬೆಳ್ತಂಗಡಿ:ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಸಂಭವನೀಯ ಪ್ರವಾಹ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರು.
ಪ್ರವಾಹಕ್ಕೆ ತುತ್ತಾಗಬಹುದಾದ ಗಣೇಶ್ ನಗರದ 32 ಕುಟುಂಬಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. ಸಂತ್ರಸ್ತರೆಲ್ಲರಿಗೂ ಸರ್ಕಾರಿ ಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದು ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಕಳೆದ ವರ್ಷದ ಮಳೆಗಾಲದಲ್ಲಿ ಮಿತ್ತಬಾಗಿಲು ಗ್ರಾಮದ ಗಣೇಶ್ ನಗರದಲ್ಲಿ ಭಾರೀ ಪ್ರಮಾಣದಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಸತತ ಮಳೆ ಸುರಿಯುತ್ತಿರುವುದರಿಂದ ಇಲ್ಲಿ ವಾಸಿಸುವುದು ಅಪಾಯಕಾರಿಯೆಂದು ಪರಿಗಣಿಸಿ, ಸ್ಥಳೀಯ ನಿವಾಸಿಗರನ್ನು ಸ್ಥಳಾಂತರಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಸೌಲಭ್ಯ ಕಲ್ಪಿಸಲಾಗಿದೆ. ರಾತ್ರಿ ವೇಳೆ ಯಾರೂ ಗಣೇಶ್ ನಗರದ ಮನೆಗಳಲ್ಲಿ ಇರುವಂತಿಲ್ಲ. ಸ್ಥಳೀಯರು ಇದಕ್ಕೆ ಸಹಕರಿಸಬೇಕು ಎಂದರು.