ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಸೆ.2 ರಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಗಣೇಶೋತ್ಸವ ಕಾರ್ಯಕ್ರಮ ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಾಲಾ ಕಾಲೇಜಿಗೆ ರಜೆ: ಸೆ. 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಗಣೇಶ ಚತುರ್ಥಿಯ ಮೂರನೇ ದಿನವಾದ ಅಂದು ನಗರದ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಯಾತ್ರೆ, ಗಣಪತಿ ನಿಮಜ್ಜನ ಕಾರ್ಯಕ್ರಮಗಳು ನಡೆಯಲಿವೆ. ಗಣಪತಿ ನಿಮಜ್ಜನ ಶೋಭಯಾತ್ರೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಅಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೆ.2 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ. ಈ ರಜೆ ನೀಡಿರುವ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವಜನಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸುವಂತೆ ಸೂಚಿಸಲಾಗಿದೆ.
ಕಾರ್ಯಕ್ರಮದ ಸಮಯ ಬದಲಾವಣೆ: ಸೆ.2 ರಂದು ಪ್ರಧಾನಿ ಮೋದಿಯವರ ಮಂಗಳೂರು ಭೇಟಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದ್ದು, ಮಧ್ಯಾಹ್ನ 1ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.