ಬಂಟ್ವಾಳ(ದ.ಕ):ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಮುಂಜಾನೆ 4 ಗಂಟೆಯ ಸುಮಾರಿಗೆ ಗ್ಯಾಸ್ ಟ್ಯಾಂಕರ್ ರಸ್ತೆ ಮಧ್ಯದಲ್ಲೇ ಉರುಳಿಬಿದ್ದಿದೆ. ಪರಿಣಾಮ, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆ ಆಗದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಈಗಾಗಲೇ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವುದರ ಜೊತೆಗೆ ಸುರಕ್ಷಿತವಾಗಿ ಟ್ಯಾಂಕರ್ ಅನ್ನು ಲಿಫ್ಟ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
ವಿಟ್ಲ ಪೊಲೀಸ್ ಎಸ್.ಐ. ವಿನೋದ್ ರೆಡ್ಡಿ, ಬಂಟ್ವಾಳ ಟ್ರಾಫಿಕ್ ಎಸ್ಸೈ ರಾಜೇಶ್ ಕೆ.ವಿ. ಮತ್ತು ವಿಟ್ಲ, ಬಂಟ್ವಾಳ ಟ್ರಾಫಿಕ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಬದಲಿ ರಸ್ತೆಯ ಸೂಚನೆಗಳನ್ನು ನೀಡುತ್ತಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಿಂದ ಕಲ್ಲಡ್ಕ ಭಾಗದಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಸಂಚರಿಸಿದರೆ, ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ.