ಮಂಗಳೂರು :ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಸರ್ಕಾರಕ್ಕೆ 6 ತಿಂಗಳ ಕಾಲಾವಧಿ ನೀಡಲಾಗಿತ್ತು. ಅದು ಮುಗಿಯುತ್ತಾ ಬಂದಿದೆ. ಕೊಟ್ಟ ಮಾತಿನಂತೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
ನಗರದ ಬಲ್ಮಠದಲ್ಲಿರುವ ಆರ್ಯ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ತಾನು ಕೊಟ್ಟಿರುವ ಮಾತನ್ನು ಉಳಿಸಬೇಕೆಂದು ರಾಜ್ಯಾದ್ಯಂತ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಕೈಗೊಳ್ಳಲಾಗಿದೆ. ಈ ಅಭಿಯಾನ ಅ.1ಕ್ಕೆ ಮುಕ್ತಾಯಗೊಳ್ಳಲಿದೆ. ಸರ್ಕಾರ ಮೀಸಲಾತಿ ನೀಡಲು ಮತ್ತೂ ವಿಳಂಬ ಮಾಡಿದ್ದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕದಲ್ಲಿ ಬಹುಸಂಖ್ಯಾತರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಲಿಂಗಾಯತದ ಎಲ್ಲಾ ಸಮಾಜಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸಬೇಕು. ಅಲ್ಲದೆ ಲಿಂಗಾಯತ ಪಂಚಮಸಾಲಿ ಸಮಾಜ ಇಂದು ಆರ್ಥಿಕ ಸಂಕಷ್ಟದಲ್ಲಿದೆ. ಆದ್ದರಿಂದ ಅವರ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕಬೇಕೆಂದು ಅಭಿಯಾನ ಕೈಗೊಳ್ಳಲಾಗಿದೆ ಎಂದರು.