ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಪ್ರೌಢಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ.
ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ:ಅಲ್ಲದೇ ಮುಂದಿನ ದಿನಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಈ ಮೂಲಕ ಸೂಚನೆ ನೀಡಿದ್ದಾರೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಇನ್ನು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಲಾಗಿದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿ, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರತಕ್ಕದ್ದು ಎಂದು ಕಟ್ಟಪ್ಪಣೆ ಹೊರಡಿಸಲಾಗಿದೆ.
ಪ್ರವಾಸಿಗರು , ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆಯೂ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.