ಮಂಗಳೂರು: ಶಿಕ್ಷಣ ರಂಗದಲ್ಲಿನ ಸೇವೆಯನ್ನು ಗುರುತಿಸಿ ಶಕ್ತಿ ಎಜುಕೇಶನ್ ಫೌಂಡೇಶನ್ನ ಅಧ್ಯಕ್ಷ ಕೆ.ಸಿ. ನಾಯಕ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.
ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ.27ರಂದು ಕೊಣಾಜೆಯ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯುವ 38ನೇ ಘಟಿಕೋತ್ಸವದಲ್ಲಿ ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.
ಗೌರವ ಡಾಕ್ಟರೇಟ್ ಪ್ರದಾನ ಕುರಿತು ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಮಾಹಿತಿ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದು, ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್. ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕುಲಪತಿ ಮಾಹಿತಿ ನೀಡಿದ್ರು.
ಈ ಘಟಿಕೋತ್ಸವದಲ್ಲಿ ಮಂಗಳೂರು ವಿವಿಯಿಂದ ಇಬ್ಬರಿಗೆ ಸಮಾನ ಶಾಸ್ತ್ರದ ಡಾಕ್ಟರ್ ಆಫ್ ಲಿಟರೇಚರ್, 105 ಮಂದಿಗೆ ಕಲೆ, ವಿಜ್ಞಾನ, ವಾಣಿಜ್ಯ, ಶಿಕ್ಷಣ ವಿಭಾಗದಲ್ಲಿ ಪಿಹೆಚ್ಡಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು. ಇವರಲ್ಲಿ ಮಹಿಳೆಯರೇ ಮೇಲುಗೈ. ಅಲ್ಲದೆ 34 ಮಂದಿಗೆ ಚಿನ್ನದ ಪದಕ ಹಾಗೂ 120 ಮಂದಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.