ಪುತ್ತೂರು: ಬಡ ಮಹಿಳೆಯರು ಮೈಕ್ರೋ ಫೈನಾನ್ಸ್ನಿಂದ ಪಡೆದ ಸಾಲ ಮನ್ನಾ, ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೊರೊನಾ ಚಿಕಿತ್ಸೆ ಹಾಗೂ ಕೋವಿಡ್ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಇಲ್ಲಿಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ - Karnataka State Debt Struggle Committee Protest
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಮಿತಿಯ ಅಧ್ಯಕ್ಷ ಬಿ.ಎಂ.ಭಟ್ ಮಾತನಾಡಿ, ಉದ್ದೇಶರಹಿತ ಹಾಗೂ ಕಾನೂನು ಬಾಹಿರವಾಗಿ ಯಾವುದೇ ಸಾಲವನ್ನು ನೀಡಬಾರದು ಎಂದು ಸರ್ಕಾರದ ಆದೇಶವಿದೆ. ಆದರೆ ಮೈಕ್ರೋ ಫೈನಾನ್ಸ್ ಕಾನೂನು ಬಾಹಿರವಾಗಿ ಅಧಿಕ ಬಡ್ಡಿಗೆ ಬಡ ಮಹಿಳೆಯರಿಗೆ ಸಾಲ ನೀಡಿದ್ದು, ಇದೀಗ ಸಾಲ ವಸೂಲಿ ಮಾಡಲು ಮನೆಗೆ ಬಂದು ಒತ್ತಡ ಹೇರುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಿ ಸಾಲದಿಂದ ಋಣಮುಕ್ತರನ್ನಾಗಿ ಮಾಡಬೇಕಿದೆ. ಅಲ್ಲದೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಬಡ ಮಹಿಳೆಯರಿಗೆ ಸಾಲ ನೀಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಕೋವಿಡ್-19 ಪರಿಹಾರ ಎಲ್ಲರಿಗೂ ಸಿಗುವಂತಾಗಬೇಕು. ಇದರ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಿದರು.